ಬೆಳಗಾವಿ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ, ಚಿಕ್ಕೋಡಿ ಸೇರಿ ರಾಜ್ಯದಲ್ಲಿ 14 ರಿಂದ 17 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬೈ, ಹೈದರಾಬಾದ್ ಕರ್ನಾಟಕದಲ್ಲಿ ಹೆಚ್ಚು ಕಾಂಗ್ರೆಸ್ ಸೀಟು ಗೆಲ್ಲುವ ವಿಶ್ವಾಸ ಇದ್ದು, ಸಚಿವರ ಮಕ್ಕಳಿಗೆ ಟಿಕೆಟ್ ಸಿಕ್ಕಿದ್ದರಿಂದ ಪಕ್ಷಕ್ಕೆ ಅನುಕೂಲವೇ ಆಗಿದೆ.
2019ರ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಈ ಬಾರಿ ನಾವು ಹೆಚ್ಚಿನ ಸೀಟು ಗೆಲ್ಲಲು ಅವಕಾಶ ಇದೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ್ದು ಹೈಕಮಾಂಡ್ಗೆ ಬಿಟ್ಟ ವಿಚಾರ. ಈ ಕುರಿತು ಬಿಜೆಪಿಯವರಿಗೆ ಟೀಕಿಸಲು ನೈತಿಕ ಹಕ್ಕಿಲ್ಲ. ಬಿಜೆಪಿಯಲ್ಲಿಯೂ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ ಉದಾಹರಣೆಗಳು ಸಾಕಷ್ಟಿವೆ. ಈ ವ್ಯವಸ್ಥೆ ಎಲ್ಲ ಪಕ್ಷಗಳಲ್ಲಿಯೂ ಇದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಇಲ್ಲ. ಈಗಾಗಲೇ ಮಳೆಯೂ ಪ್ರಾರಂಭವಾಗಿದ್ದು,
ಅಲ್ಲಲ್ಲಿ ಎರಡು ಗಂಟೆಗಳ ಕಾಲ ಹೆಚ್ಚು ಮಳೆಯಾಗಿದೆ. ಇನ್ನು ಸಮರ್ಪಕ ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ಗ್ರಾಮ ಪಂಚಾಯಿತಿಗೆ ಹೊಸ ಟ್ಯಾಂಕರ್ ಖರೀದಿಸಲು ಸೂಚಿಸಿದ್ದೇವೆ. ಕೆಲವು ಗ್ರಾಪಂಗಳಲ್ಲಿ ಹೊಸ ಟ್ಯಾಂಕರ್ ಕೂಡ ಖರೀದಿಸಿದ್ದಾರೆ. ಇನ್ನುಳಿದವರು ಬಾಡಿಗೆ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ. ನೀರಿನ ಸಮಸ್ಯೆ ಇದ್ದಲ್ಲಿ ತಹಶೀಲ್ದಾರ್ ಗಮನಕ್ಕೆ ತಂದರೆ ನೀರಿನ ಸಮಸ್ಯೆ ಪರಿಹರಿಸುತ್ತಾರೆಂದು ಹೇಳಿದರು.