ನವದೆಹಲಿ: ಇಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಳ್ಳಲಿದ್ದಾರೆ. ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಖರ್ಗೆ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.
ಶನಿವಾರ ಹಲವಾರು ಇಂಡಿಯಾ ಒಕ್ಕೂಟದ ಸದಸ್ಯರ ಜೊತೆ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಇಂಡಿಯಾ ಒಕ್ಕೂಟದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದೆ. ಇಂದು ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಎನ್ಡಿಎ ಮಿತ್ರ ಪಕ್ಷಗಳ ಜೊತೆ ಸೇರಿ ಮೋದಿ ಸಮ್ಮಿಶ್ರ ಸರ್ಕಾರವನ್ನು ಮುನ್ನಡೆಸಲಿದ್ದಾರೆ.