ಬೆಂಗಳೂರು: ಹಾಲಿನ ಉತ್ಪಾದನೆ ಕಡಿಮೆಯಾಗಿರುವುದಕ್ಕೆ ಭ್ರಷ್ಟ ಬಿಜೆಪಿ ಪಕ್ಷವೇ ಕಾರಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಶಿವಾನಂದ ವೃತ್ತದ ಬಳಿ ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿರುವ ಅವರು, ‘ರಾಜ್ಯದ ಪ್ರಮುಖ ದಿನ ಪತ್ರಿಕೆಗಳು ಇಂದು ಹಾಲು ಮತ್ತು ಹಾಲಿನ ಉತ್ಪನ್ನಗಳ ಕುರಿತಂತೆ ಅತ್ಯಂತ ಆತಂಕಕಾರಿಯಾದ ವರದಿಗಳನ್ನು ಪ್ರಕಟಿಸಿವೆ. ಈ ಮಾರ್ಚ್ನಲ್ಲಿ ಪ್ರತಿ ದಿನ 99 ಲಕ್ಷ ಲೀಟರುಗಳಷ್ಟು ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರುಗಳಷ್ಟು ಹಾಲನ್ನು ಮಾತ್ರ ಕೆಎಂಎಫ್ ಸಂಗ್ರಹಿಸುತ್ತಿದೆ.
ಇದೂ ಕೂಡ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಪ್ರಸ್ತುತ ಪ್ರತಿ ದಿನ ಸುಮಾರು 28 ಲಕ್ಷ ಲೀಟರುಗಳಷ್ಟು ಹಾಲಿನ ಉತ್ಪಾದನೆ ಕಡಿಮೆಯಾಗಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ರಾಜ್ಯದ ಪಶುಪಾಲಕರಿಗೆ ಪ್ರತಿ ದಿನ ಸುಮಾರು 11 ಕೋಟಿ ರೂಪಾಯಿಗಳಷ್ಟು ಹಣ ಕೈತಪ್ಪಿ ಹೋಗುತ್ತಿದೆ. ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಸಂಸಾರಗಳನ್ನು ನಡೆಸಲು ಹೈನುಗಾರಿಕೆ ಒಂದು ಪ್ರಮುಖ ಸಾಧನವಾಗಿತ್ತು. ಇದಕ್ಕೆ ಯಾರು ಹೊಣೆ?’ ಎಂದು ಪ್ರಶ್ನೆ ಮಾಡಿದ್ದಾರೆ.