ನಟಿ ಪವಿತ್ರಾ ಗೌಡಗೆ ಕೆಟ್ಟಿದಾಗಿ ಮೇಸೆಜ್ ಮಾಡಿದ್ದರು ಎಂಬ ಕಾರಣಕ್ಕೆ ರೇಣುಕಾಸ್ವಾಮಿಯನ್ನು ನಟ ದರ್ಶನ್ ಎಂಡ್ ಗ್ಯಾಂಕ್ ಕೊಲೆ ಮಾಡಿದೆ. ಈ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಜನರನ್ನು ಬಂಧಿಸಿದ್ದು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇದರ ನಡುವೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಹಲವು ಆಘಾತಕಾರಿ ವಿಷಯಗಳು ಹೊರಬರುತ್ತಿವೆ. ರೇಣುಕಾ ಸ್ವಾಮಿಯ ಶವವನ್ನು ಎಸೆದು, ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ನೀಡಿದ್ದರು ಎನ್ನಲಾಗುತ್ತಿದೆ.
ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡಿದ್ದರು. ಶವವನ್ನು ಸಾಗಿಸುವ ದಾರಿ ಹುಡುಕಿದ್ದಾರೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ ಮೂವತ್ತು ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಗೊತ್ತಾಗಿದೆ.
ಹಣ ಪಡೆದಿದ್ದ ಗ್ಯಾಂಗ್ನವರು ರಾತ್ರಿ ಯಿಡೀ ದರ್ಶನ್ ಗ್ಯಾಂಗ್ ಜೊತೆ ಮೊಬೈಲ್ ಮೂಲಕ ಸಂಭಾಷಣೆ ಮಾಡಿರುವ ವಿಚಾರವೂ ತಿಳಿದುಬಂದಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್ ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿದ್ದರು ಎನ್ನಲಾಗುತ್ತಿದೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.