ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಯಾಗಿದ್ದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಿಸುವ ವಿಚಾರದ ಗೊಂದಲ ಕುರಿತು ಆಕ್ಷೇಪಣೆ ಸಲ್ಲಿಸಲು ಎನ್ಎಚ್ಎಐಗೆ ಬೆಂಗಳೂರಿನ ಹೈಕೋರ್ಟ್ ಸೂಚನೆ ನೀಡಿದೆ.
ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ನೇತೃತ್ವದ ವಿಭಾಗೀಯ ಪೀಠವು, ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ಹೈವೇ ಟೋಲ್ ಸಂಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ನಡೆದಿರುವ ಧರಣಿ ಕುರಿತಾಗಿ ಮಾಧ್ಯಮಗಳಲ್ಲಿ ಪ್ರಕಟಿಸಿ ವರದಿಯನ್ನೂ ಪ್ರಸ್ತಾಪಿಸಿದೆ.
ಈ ಪ್ರಕರಣ ಸ್ವಯಂ ಪ್ರೇರಿತವಾಗಿ ಪರಿಗಣಿಸಬೇಕಿದೆ ಎಂದು ಅಭಿಪ್ರಾಯ ಪಟ್ಟ ನ್ಯಾಯಪೀಠ, ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಎನ್ಎಚ್ಎಐಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ಅಲ್ಲದೇ, ಶುಲ್ಕ ವಿಧಿಸಲು ರಾಷ್ಟ್ರೀಯ ಹೆದ್ದಾರಿ ಶುಲ್ಕ ರಸ್ತೆ 2008ರ ನಿಯಮ 3ರ ಅಡಿ ಅವಕಾಶವಿದೆ. ಇದಕ್ಕೂ ಮುನ್ನ, ಅಧಿಸೂಚನೆ ಪ್ರಕಟ ಸೇರಿದಂತೆ ಹಲವು ಪೂರ್ವಾಗತ್ಯಗಳನ್ನು ಪೂರೈಸಬೇಕು. ಸವಾರರಿಂದ ಶುಲ್ಕ ಸಂಗ್ರಹ ಮಾಡಲಾಗುತ್ತಿದ್ದು, ಈ ವಿಷಯವನ್ನು ಪರಿಗಣಿಸಬೇಕಿದೆ. ಈ ಸಂಬಂಧ ಎನ್ಎಚ್ಎಐ, ಅದರ ಯೋಜನಾ ನಿರ್ದೇಶಕ, ಯೋಜನೆ ಜಾರಿ ಘಟಕ ಮತ್ತು ಎನ್ಎಚ್ಎಐನ ಸಹಾಯಕ ಕಾರ್ಯಕಾರಿ ಎಂಜಿನಿಯರ್ಗಳು ಮೂರು ವಾರಗಳಲ್ಲಿ ಈ ಸಂಬಂಧ ವಿವರವಾದ ಆಕ್ಷೇಪಣೆಗಳನ್ನು ಸಲ್ಲಿಸಬೇಕು ಎಂದು ಸೂಚನೆ ನೀಡಿದೆ.