ಹೊಸ ರಾಜ್ಯಾಧ್ಯಕ್ಷರ ನೇಮಕವೂ ಸೇರಿದಂತೆ ಜೆಡಿಎಸ್ಗೆ ಶಕ್ತಿ ತುಂಬಲು ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ ಕೈಗೊಳ್ಳಲು ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಅತ್ಯಂತ ಪ್ರಮುಖ ನಿರ್ಧಾರ ಕೈಗೊಳ್ಳಲಾಗುವುದು. ಪದಾಧಿಕಾರಿಗಳ ಬದಲಾವಣೆ ಮಾಡಲಾಗುವುದು. ಹೊಸ ರಾಜ್ಯಾಧ್ಯಕ್ಷರ ಚುನಾವಣೆಯೂ ನಡೆಯಲಿದೆ. ಸದಸ್ಯತ್ವ ಅಭಿಯಾನಕ್ಕೆ ರಾಜ್ಯದ 31 ಜಿಲ್ಲೆಗಳಲ್ಲಿನ ವಿಧಾನಸಭೆ ಕ್ಷೇತ್ರಗಳಲ್ಲಿ ಮುಖಂಡರಿಗೆ ಉಸ್ತುವಾರಿ ವಹಿಸಲಾಗುವುದು. ಜೆಡಿಎಸ್ ಅನ್ನು ಕೇಡರ್ ಬೇಸ್ ಪಕ್ಷವನ್ನಾಗಿ ರೂಪಿಸುತ್ತೇವೆ,” ಎಂದು ಸಭೆ ಬಳಿಕ ಕುಮಾರಸ್ವಾಮಿತಿಳಿಸಿದರು.
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಅವಿರತವಾಗಿ ಶ್ರಮಿಸಿ ಒಳ್ಳೆಯ ಫಲಿತಾಂಶ ತಂದು ಕೊಟ್ಟಿದ್ದಾರೆ. ಇವರೆಲ್ಲರ ಶ್ರಮ, ಮಂಡ್ಯ ಜನತೆಯ ಆಶೀರ್ವಾದದಿಂದ ಕೇಂದ್ರ ಸಚಿವನಾಗಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರು ನನಗೆ ಗುರುತರ ಜವಾಬ್ದಾರಿ ನೀಡಿದ್ದಾರೆ. ನನ್ನ ಅನುಪಸ್ಥಿತಿಯಲ್ಲಿ ಪಕ್ಷಕ್ಕೆ ಬಲ ತುಂಬಬೇಕಿದೆ.
ಅದಕ್ಕೆ ಏನೆಲ್ಲ ಮಾಡಬೇಕು ಎಂಬ ಬಗ್ಗೆ ನಾಯಕರು, ಶಾಸಕರ ಜತೆ ಚರ್ಚೆ ಮಾಡಿದ್ದೇನೆ,” ಎಂದು ಹೇಳಿದರು. ಸಾಮೂಹಿಕ ಜವಾಬ್ದಾರಿ ಮೂಲಕ ಸಂಘಟನೆಗೆ ಹೆಚ್ಚು ಶಕ್ತಿ ತುಂಬಲು ತೀರ್ಮಾನಿಸಲಾಗಿದೆ. ನಿಖಿಲ್ ಕುಮಾರಸ್ವಾಮಿ ಸಂಘಟನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೊಡಗಿಕೊಳ್ಳಬೇಕು ಎಂದು ಎಲ್ಲರೂ ಸಲಹೆ ನೀಡಿದ್ದಾರೆ,” ಎಂದು ಮಾಹಿತಿ ನೀಡಿದರು.