ಕೊಡಗು ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಮತ್ತೆ ಬಿರುಸು ಪಡೆದಿದ್ದು ಹಾರಂಗಿ ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ. ಜಲಾಶಯಕ್ಕೆ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ನಿನ್ನೆ ಸಂಜೆ 4 ಕ್ರಸ್ಟ್ ಗೇಟ್ಗಳನ್ನು ತೆರೆದು 1 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
ಜಲಾಶಯ ತುಂಬಲು ಇನ್ನೂ 10 ಅಡಿಗಳು ಬಾಕಿ ಇದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆ ಬಿರುಸು ಪಡೆಯುವ ಸಾಧ್ಯತೆ ಇರುವುದರಿಂದ ಕುಶಾಲನಗರ ಹಾಗೂ ನದಿ ದಂಡೆಯ ನಿವಾಸಿಗಳ ಸುರಕ್ಷತೆಯ ದೃಷ್ಟಿಯಿಂದ ಜಲಾಶಯ ಭರ್ತಿಗೂ ಮುನ್ನವೇ ನೀರನ್ನು ಹೊರಬಿಡಲಾಗುತ್ತಿದೆ.
ಪ್ರಸ್ತುತ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿ ಇದ್ದು, ಇಂದಿನ ನೀರಿನ ಮಟ್ಟ 2848.76 ಅಡಿ ಇದೆ. 2,394 ಕ್ಯೂಸೆಕ್ ಒಳ ಹರಿವಿದೆ. ಹಾರಂಗಿ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಮಾಡುವ ವೇಳೆಯಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ಗೌಡ, ತಹಶೀಲ್ದಾರ್ ಕಿರಣ್ ಗೌರಯ್ಯ, ಕಾಡಾ ಅಧೀಕ್ಷಕ ಎಂಜಿನಿಯರ್ ರಘುಪತಿ, ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ಉಪಸ್ಥಿತರಿದ್ದರು.