ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದ ವಿಶೇಷ ಪೂಜೆ ಪ್ರತಿ ವರ್ಷದಂತೆ ಈ ಬಾರಿಯೂ ಚಾಮುಂಡಿಬೆಟ್ಟದಲ್ಲಿನ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿತು.
ಪೂಜೆಯಲ್ಲಿ ರಾಜವಂಶಸ್ಥ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗಿಯಾಗಿದ್ದರು. ಸಂಸದರಾದ ಬಳಿಕ ಮೊದಲ ಸಲ ಪೂಜೆಯಲ್ಲಿ ಪಾಲ್ಗೊಂಡರು. ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರಿಗೆ ಯಾವುದೆ ತೊಂದರೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಬೆಟ್ಟಕ್ಕೆ ಆಗಮಿಸುವ ಭಕ್ತರಿಗಾಗಿ ಲಲಿತಮಹಲ್ ಪ್ಯಾಲೇಸ್ ಬಳಿಯಿರುವ ಮೈದಾನದಿಂದ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಕೇವಲ ಶುಕ್ರವಾರ ಮಾತ್ರ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಶನಿವಾರ, ಭಾನುವಾರ ಉಚಿತ ಬಸ್ ವ್ಯವಸ್ಥೆ ಇರುವುದಿಲ್ಲ. ಆಷಾಢ ಮಾಸದ ನಾಲ್ಕು ಶುಕ್ರವಾರ ಶನಿವಾರ ಭಾನುವಾರದಂದು ವಾಹನಗಳಿಗೆ ನಿಷೇಧವಿರುತ್ತದೆ. ಇಂದಿನಿಂದ ಜುಲೈ 14, 19, 21, 26, 28ರವರೆಗೆ ಮತ್ತು ಆಗಷ್ಟ 2ರಿಂದ 4ರವರೆಗೆ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಕ್ಕೆ ನಿರ್ಬಂಧಿಸಲಾಗಿದೆ.