ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಇಂದು ಬನಶಂಕರಿಯ ಅವರ ನಿವಾಸದಲ್ಲಿ ಅಂತಿಮ ದರ್ಶನವಾದ ಬಳಿಕ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಕಳೆದ 2 ವರ್ಷಗಳಿಂದ ಶ್ವಾಸಕೋಶದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅಪರ್ಣಾ ಜು.11ರಂದು ಬನಶಂಕರಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಚಿತ್ರರಂಗಕ್ಕೆ ಕಳೆದ 3 ದಶಕಗಳಿಂದ ಸೇವೆ ಸಲ್ಲಿಸಿರುವ ನಟಿಗೆ ಗಾಳಿಯಲ್ಲಿ 3 ಸುತ್ತು ಗುಂಡು ಹಾರಿಸುವ ಮೂಲಕ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಬಾಲನಟಿಯಾಗಿ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ಅಪರ್ಣಾ ನಟನೆಯ ಜೊತೆಗೆ ನಿರೂಪಕಿಯಾಗಿಯೂ ಸೈ ಎನಿಸಿಕೊಂಡಿದ್ದರು. ನಿರೂಪಣೆಗೆ ಹೊಸ ಸ್ಪರ್ಶ ನೀಡಿದವರು ಈ ಅಪರ್ಣಾ. ಈಕೆಯ ನಿಧನ ಕೋಟ್ಯಾಂತರ ಕನ್ನಡಿಗರಿಗೆ ನುಂಗಲಾರದ ತುತ್ತಾಗಿದೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದ ಅಪರ್ಣಾ ಮತ್ತೆಂದು ಬಾರದ ಲೋಕಕ್ಕೆ ತೆರಳಿದ್ದಾರೆ.