ಬೆಂಗಳೂರು: ಸಾವಿರಾರು ಕೋಟಿ ರೂ. ಮೊತ್ತದ ಮುಡಾ ಹಗರಣ ಮತ್ತು ದಲಿತರ ಹಣವನ್ನು ಲೂಟಿ ಮಾಡಿದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲಿ ಉತ್ತರ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.
ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಶಾಸಕರ ಭವನದ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಬಿಜೆಪಿ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ತನಿಖೆಯನ್ನು ನಿವೃತ್ತ ನ್ಯಾಯಾಧೀಶರಿಂದ ನಡೆಸಿದರೆ ಸಾಲದು. ಸಿಎಂಗೆ ನಿಜವಾಗಿಯೂ ತಾಕತ್ತಿದ್ದರೆ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ಈ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬವೇ ಪಾಲುದಾರರಾಗಿದ್ದಾರೆ. ಸಾವಿರಾರು ಕೋಟಿ ರೂ. ಬೆಲೆಬಾಳುವ ನಿವೇಶನಗಳಿಗೆ ಮೈಸೂರು ಮುಡಾ ಹಗರಣ ನಡೆದಿದೆ. ಈ ಹಗರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಿ ಸದನದ ಹೊರಗೆ ಹೋರಾಟ ನಡೆಸಿದ್ದೇವೆ. ಸದನದ ಒಳಗೆ ಕೂಡ ಹೋರಾಟ ಮುಂದುವರೆಯಲಿದೆ. ಅಲ್ಲದೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.