ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಹಾಗೂ SCSP-TSP ಹಣ ದುರ್ಬಳಕೆ ಖಂಡಿಸಿ ಎಸ್ಟಿ ಮೋರ್ಚಾದಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಪ್ರಮುಖ ನಾಯಕರೂ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಶಾಸಕರಾದ ಕೆ.ಗೋಪಾಲಯ್ಯ, ಗೋವಿಂದ ಕಾರಜೋಳ, ಸಿಮೆಂಟ್ ಮಂಜು, ಶ್ರೀವತ್ಸ, ಮಾಜಿ ಸಚಿವ ಕೆ.ಆರ್ ನಾರಾಯಣ ಗೌಡ, ಪರಿಷತ್ ಸದಸ್ಯರು, ಮಾಜಿ ಸಂಸದ ಮುನಿಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಸೇರಿದಂತೆ ಘಟಾನುಘಟಿ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ನಂತರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದರು.
ಪ್ರತಿಭಟನಾ ಮೆರವಣಿಗೆಯಲ್ಲಿ ವಿಧಾನಸೌಧಕ್ಕೆ ಮುತ್ತಿಗೆಹಾಕಲು ತೆರಳುತ್ತಿದ್ದ ವೇಳೆ ಶಾಸಕರೂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನ ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ ದೊಡ್ಡ ಪ್ರಮಾಣದಲ್ಲೇ ಆಯಿತು. ಕಾರ್ಯಕರ್ತರು ಬ್ಯಾರಿಕೇಡ್ ಕಿತ್ತೆಸೆದು ಆಕ್ರೋಶ ಹೊರಹಾಕಿದರು, ರಸ್ತೆಯಲ್ಲಿ ಬಸ್ ಸಂಚಾರಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದರು.