ಕಳೆದ ಕೆಲವು ವರ್ಷಗಳಿಂದ ನನಗೆ ಹಾಗೂ ನನ್ನ ಕುಟುಂಬಕ್ಕೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನಿಂದ ನಿರಂತರ ಜೀವ ಬೆದರಿಕೆ ಕರೆ ಬರುತ್ತಿವೆ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಹೇಳಿದ್ದಾರೆ. ಕೆಲವು ತಿಂಗಳ ಹಿಂದೆ ತಮ್ಮ ಮನೆ ಮೇಲೆ ನಡೆದ ದಾಳಿ ಬಗ್ಗೆ ಮಾತನಾಡಿದ ಸಲ್ಮಾನ್ ಖಾನ್, ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನನ್ನನ್ನು ಕೊಲ್ಲಲು ಸಕಲ ಪ್ರಯತ್ನವನ್ನೂ ನಡೆಸುತ್ತಲೇ ಇದೆ. ಗುಂಡಿನ ದಾಳಿ ಬಳಿ ನನ್ನ ಕುಟುಂಬಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.
ಮುಂಬೈ ಕ್ರೈಂ ಬ್ರ್ಯಾಂಚ್ಗೆ ವಿಚಾರಣೆ ವೇಳೆ ಮಾಹಿತಿ ನೀಡಿದ ಸಲ್ಮಾನ್, ಅಂದು ನನಗೆ ಪಟಾಕಿಯಂತಹ ಸದ್ದು ಕೇಳಿಸಿತ್ತು. ಸುಮಾರು ಬೆಳಗ್ಗೆ 4.55 ಗಂಟೆ ಹೊತ್ತಿಗೆ ಬೈಕ್ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗ್ಯಾಲಕ್ಸಿ ಅಪಾರ್ಟ್ಮೆಂಟ್ನ ಬಾಲ್ಕನಿಯನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದರು. ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಗುರಿಯಾಗಿಸಿ ಆ ದಾಳಿ ನಡೆದಿತ್ತು. ಲಾರೆನ್ಸ್ ಬಿಷ್ಣೋಯಿ ಈ ಕೃತ್ಯದ ಹೊಣೆ ಹೊತ್ತುಕೊಂಡಿರುವ ಬಗ್ಗೆ ಮಾಧ್ಯಮಗಳ ಮೂಲಕ ಮಾಹಿತಿ ಸಿಕ್ಕಿತ್ತು ಎಂದಿದ್ದಾರೆ.
ಈ ಹಿಂದೆ ಕೂಡ ಸಂದರ್ಶನವೊಂದರಲ್ಲಿ ಲಾರೆನ್ಸ್ ಬಿಷ್ಣೋಯ್ ಮತ್ತು ಅವರ ಗ್ಯಾಂಗ್ ಸದಸ್ಯರು ನನ್ನನ್ನು ಮತ್ತು ನನ್ನ ಸಂಬಂಧಿಕರನ್ನು ಕೊಲ್ಲುವ ಬಗ್ಗೆ ಮಾತನಾಡಿದ್ದ. ಹಾಗಾಗಿ, ಲಾರೆನ್ಸ್ ಬಿಷ್ಣೋಯ್ ತನ್ನ ಗ್ಯಾಂಗ್ ಸದಸ್ಯರ ಸಹಾಯದಿಂದ ನನ್ನ ಕುಟುಂಬ ಸದಸ್ಯರು ಒಳಗೆ ಮಲಗಿದ್ದಾಗ ಗುಂಡಿನ ದಾಳಿ ನಡೆಸಿ ನನ್ನನ್ನು ಮತ್ತು ನನ್ನ ಕುಟುಂಬ ಸದಸ್ಯರನ್ನು ಕೊಲ್ಲಲು ಯೋಜಿಸಿ ದಾಳಿ ನಡೆಸಿದ್ದಾನೆ ಎಂದು ನಾನು ನಂಬುತ್ತೇನೆ ಎಂದು ಸಲ್ಮಾನ್ ಹೇಳಿಕೆ ನೀಡಿದ್ದಾರೆ.
ಎಪ್ರಿಲ್ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್ಗಳಾದ ಸಾಗರ್ ಪಾಲ್ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.