ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯವರು ಬೇಕಾದರೆ ಪಾದಯಾತ್ರೆ ಮಾಡಿಕೊಳ್ಳಲಿ. ತಮ್ಮ ಸರ್ಕಾರವಿದ್ದಾಗ ನಡೆದ 40% ರಷ್ಟು ಕಮಿಷನ್, ಕೋವಿಡ್ ಕಾಲದ ಹಗರಣ, ಮಾರಿಷಸ್ನಲ್ಲಿ ಇಟ್ಟಿದ್ದಾರೆ ಎನ್ನಲಾಗುತ್ತಿರುವ ಹತ್ತು ಸಾವಿರ ಕೋಟಿ ರೂಪಾಯಿ ಹಗರಣಗಳ ಬಗ್ಗೆ ಅವರು ಮೊದಲು ಜನತೆಗೆ ಸತ್ಯ ತಿಳಿಸಲಿ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಕುಟುಕಿದರು.
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಬಿಜೆಪಿಯಲ್ಲಿ ವಿಜಯೇಂದ್ರ, ಅಶ್ವತ್ಥನಾರಾಯಣ, ಅಶೋಕ್, ರಮೇಶ್ ಜಾರಕಿಹೊಳಿ, ಯತ್ನಾಳ್ ಹೀಗೆ ಇಪ್ಪತ್ತು ಗುಂಪುಗಳಿವೆ. ಪಾದಯಾತ್ರೆ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಮಧ್ಯೆಯೇ ಒಮ್ಮತವಿಲ್ಲ. ಬಿಜೆಪಿಯಲ್ಲೂ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಬೇರೆ ತರಹ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು
ಬಿಜೆಪಿ ಸರ್ಕಾರವಿದ್ದಾಗ ಸಾಲುಸಾಲು ಹಗರಣಗಳು ನಡೆದಿದ್ದವು. ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಏನೂ ಇಲ್ಲ. ಈಗಾಗಲೇ ಅವರು ಇದರ ಬಗ್ಗೆ ಸ್ಪಷ್ಟೀಕರಣ ಕೊಟ್ಟಿದ್ದಾರೆ ಎಂದು ಪ್ರತಿಪಾದಿಸಿದರು.