ಯಾದಗಿರಿ: ಯಾದಗಿರಿ ಸೈಬರ್ ಕ್ರೈಂ ಠಾಣೆ ಪಿಎಸ್ಐ
ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹಾಗೂ ಅವರ ಪುತ್ರನ ವಿರುದ್ಧ ಆರೋಪ ಸಾಬೀತಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವರು, ಪಿಎಸ್ಐ ಸಾವು ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ಪೋಸ್ಟ್ ಮಾರ್ಟಮ್ ನಿರೀಕ್ಷಿಸುತ್ತಿದ್ದೇವೆ. ವರದಿ ಬಂದ ಬಳಿಕ ಸಾವಿನ ಬಗ್ಗೆ ಗೊತ್ತಾಗಲಿದೆ ಎಂದರು.
ನಾನು ಬುಧವಾರ ಮೃತ ಪಿಎಸ್ಐ ಮನೆಗೆ ಹೋಗುತ್ತೇನೆ. ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ. ಪರಶುರಾಮ್ ಪತ್ನಿ ಅವರಿಗೆ ಸರ್ಕಾರಿ ಕೆಲಸ ಕೊಡಿಸಲು ತೀರ್ಮಾನಿಸಲಾಗಿದೆ ಎಂದರು. ಇನ್ನು ಪಿಎಸ್ಐ ಸಾವಿನ ಪ್ರಕರಣದಲ್ಲಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರನ ವಿರುದ್ಧ ಆರೋಪ ಕೇಳಿಬಂದಿದೆ. ತನಿಖೆ ವರದಿ ಬರಲಿ. ತನಿಖೆಯಲ್ಲಿ ಸಾಬೀತಾದರೆ ಶಾಸಕರ ವಿರುದ್ಧ ಹಾಗೂ ಅವರ ಪುತ್ರನ ಪಾತ್ರವಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು.