ಬೆಂಗಳೂರು: ‘ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಒಟ್ಟು 34,967 ಮಂಜೂರಾತಿ ಹುದ್ದೆಗಳ ಪೈಕಿ 14,523 ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಹಂತಹಂತವಾಗಿ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಈ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆಯ ವೇಳೆ ಸರ್ಕಾರದ ಪರ ವಕೀಲರು ಸರ್ಕಾರದ ಹೇಳಿಕೆಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.
ವೈದ್ಯಾಧಿಕಾರಿಗಳು, ತಜ್ಞರು, ದಂತ ವೈದ್ಯರು, ಲ್ಯಾಬ್ ಟೆಕ್ನಿಷಿಯನ್, ಫಾರ್ಮಸಿ, ನರ್ಸಿಂಗ್ ಅಧಿಕಾರಿಗಳು ಹಾಗೂ ಡಿ ಗ್ರೂಪ್ ನೌಕರರೂ ಸೇರಿದಂತೆ ಆರೋಗ್ಯ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳ ಒಟ್ಟು ಸಂಖ್ಯೆ 34,967ರಷ್ಟಿದ್ದು, ಇದರಲ್ಲಿ 20,444 ಹುದ್ದೆಗಳು ಭರ್ತಿಯಾಗಿವೆ ಎಂದು ತಿಳಿಸಲಾಗಿದೆ.
‘ಒಟ್ಟು 14,523 ಹುದ್ದೆಗಳು ಖಾಲಿ ಇದ್ದು, ಹೊರಗುತ್ತಿಗೆ, ಸರ್ಕಾರಿ ಗುತ್ತಿಗೆ, ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ 16,501 ಹುದ್ದೆಗಳ ಕಾರ್ಯ ನಿರ್ವಹಣೆಯಾಗುತ್ತಿದೆ. ಗ್ರಾಮೀಣ ಕಡ್ಡಾಯ ಸೇವೆಯಡಿ 2,371 ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. 204 ಕಿರಿಯ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. 413 ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. 498 ಫಾರ್ಮಸಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 705 ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಖಾಲಿ ಇರುವ 10,253 ಡಿ ಗ್ರೂಪ್ ಹುದ್ದೆಗಳಲ್ಲಿ ಶೇ 75ರಷ್ಟು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ವಿವರಿಸಲಾಗಿದೆ.