ಮಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಕೂಡ ಗರಿಗೆದರಿದ್ದು, ರಾಜಕೀಯ ಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾಗಿದೆ.
ರಾಜ್ಯಪಾಲರು ಸಂವಿಧಾನ ವಿರೋಧಿ ಕ್ರಮ ಅನುಸರಿಸಿದ್ದಾರೆ, ಕೇಂದ್ರದ ನಿರ್ದೇಶನದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ರಾಜ್ಯದಾದ್ಯಂತ ನಿನ್ನೆ ಪ್ರತಿಭಟನೆ ನಡೆಸಿದೆ.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಮುಖಂಡ ಐವಾನ್ ಡಿಸೋಜಾ, ರಾಜ್ಯಪಾಲರನ್ನು ವಾಪಾಸ್ ಕರೆಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ.
ಬಾಂಗ್ಲಾದೇಶದ ಪ್ರಧಾನಿಗೆ ಬಂದ ಸ್ಥಿತಿ ಇಲ್ಲಿನ ರಾಜ್ಯಪಾಲರಿಗೆ ಬರಬಹುದು ಎಂದು ಹೇಳುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸದ್ಯ ಈ ಹೇಳಿಕೆಯ ಬೆನ್ನಲ್ಲೆ ಇನ್ನೋರ್ವ ಕಾಂಗ್ರೆಸ್ ಮುಖಂಡ ಇದೇ ಹೇಳಿಕೆಯನ್ನು ಪುನರ್ ಉಚ್ಛರಿಸುವ ಮೂಲಕ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಯುವ ಮುಖಂಡರಾಗಿರುವ ರಕ್ಷಿತ್ ಶಿವರಾಮ್ ಅವರು, ಇಂದು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಾಂಗ್ಲಾ ಮಾದರಿಯ ಹಿಂಸಾಚಾರದ ಎಚ್ಚರಿಕೆ ನೀಡಿದ್ದಾರೆ.