ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿರುವ ಫೋಟೋ ವೈರಲ್ ಆಗಿ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ. ದುಡ್ಡಿದ್ದರೆ ಜೈಲಿನಲ್ಲಿ ಏನು ಬೇಕಾದ್ರು ಸಿಗುತ್ತದೆ ಎನ್ನುವಂತೆ ಮಾಡಿದೆ ಇದೋಂದು ಫೋಟೋ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಜಿ&ಐಜಿಪಿ ಅಲೋಕ್ ಮೋಹನ್ ಅವರಿಂದ ಮಾಹಿತಿ ಪಡೆದು ಖಡಕ್ ಸೂಚನೆ ನೀಡಿದರು. ಕೂಡಲೆ ದರ್ಶನ ಮತ್ತು ಇತರರನ್ನು ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ, “ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ.
“ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.
ನಿಯಮ ಉಲ್ಲಂಘಿಸಿದ ಜೈಲಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಿ. ಪ್ರಕರಣದ ಸಂಪೂರ್ಣ ವರದಿ ನೀಡುವಂತೆ ಎಂದು ಖಡಕ್ ಸೂಚನೆ ನೀಡಿದರು. ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತು ಆಗಿರುವ ಜೈಲು ಅಧಿಕಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಅಲೋಕ್ ಮೋಹನ್ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ 7 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.