15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆದ ಅನ್ಯಾಯವನ್ನು ಸರಿಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ 16ನೇ ಹಣಕಾಸು ಆಯೋಗಕ್ಕೆ ಮನವಿ ಮಾಡಿದ್ದಾರೆ. ಖಾಸಗಿ ಹೊಟೇಲ್ನಲ್ಲಿ ನಡೆದ 16ನೇ ಹಣಕಾಸು ಆಯೋಗದ ಸಭೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಆಯೋಗಕ್ಕೆ ತಿಳಿಸಿದರು. ಜೊತೆಗೆ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆದ ನಷ್ಟವನ್ನು ಅಂಕಿಅಂಶಗಳ ಸಮೇತ ಆಯೋಗದ ಮುಂದಿಟ್ಟು ರಾಜ್ಯಕ್ಕೆ ನ್ಯಾಯ ಕೊಡುವಂತೆ ಮನವಿ ಮಾಡಿದರು.
ಭಾರತದ ಅಭಿವೃದ್ಧಿಗೆ ಕರ್ನಾಟಕ ಪ್ರಧಾನ ಪಾತ್ರ ವಹಿಸುತ್ತಿದೆ. ಒಟ್ಟು ಜನಸಂಖ್ಯೆಯ ಶೇ.5ರಷ್ಟಿದ್ದರೂ ರಾಷ್ಟ್ರೀಯ ಜಿಡಿಪಿಗೆ ಕರ್ನಾಟಕ ಅಂದಾಜು ಶೇ.8.4 ರಷ್ಟು ಪಾಲು ನೀಡುತ್ತಿದೆ. ಇಡೀ ದೇಶದಲ್ಲೇ ಜಿಡಿಪಿ ದೇಣಿಗೆಯಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಪ್ರತಿ ವರ್ಷ ದೇಶದ ಒಟ್ಟು ತೆರಿಗೆ ಆದಾಯಕ್ಕೆ ಕರ್ನಾಟಕ ಸುಮಾರು ರೂ.4 ಲಕ್ಷ ಕೋಟಿಯಷ್ಟು ಪಾಲು ನೀಡುತ್ತಿದ್ದರೂ ರಾಜ್ಯಕ್ಕೆ ತೆರಿಗೆ ಪಾಲಿನ ರೂಪದಲ್ಲಿ 45ಸಾವಿರ ಕೋಟಿ ರೂ. ಹಾಗೂ ಅನುದಾನದ ರೂಪದಲ್ಲಿ 15 ಸಾವಿರ ಕೋಟಿ ರೂ. ದೊರಕುತ್ತಿದೆ. ಅಂದರೆ ಕರ್ನಾಟಕ ನೀಡುವ ಪ್ರತಿ ಒಂದು ರೂಪಾಯಿಗೆ ರಾಜ್ಯ ಕೇವಲ 15 ಪೈಸೆಯನ್ನು ಮಾತ್ರ ಹಿಂದಕ್ಕೆ ಪಡೆಯುತ್ತಿದೆ ಎಂದು ಅವರು ಆರೋಪಿಸಿದರು.
15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನೀಡುವ ಪಾಲು 4.713 ಯಿಂದ 3.647 ಗೆ ತಗ್ಗಿದೆ. ಇದರಿಂದಾಗಿ 2021-26ರ 5 ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ ರೂ.68,275 ಕೋಟಿ ರೂ. ನಷ್ಟ ಉಂಟಾಗಿದೆ. ಕರ್ನಾಟಕಕ್ಕೆ ದೊರೆತ ಪಾಲಿನಲ್ಲಿ ಉಂಟಾದ ಇಷ್ಟು ದೊಡ್ಡ ಮೊತ್ತದ ಕಡಿತದ ಬಗ್ಗೆ ಹಣಕಾಸು ಆಯೋಗಕ್ಕೆ ಅರಿವಿದ್ದು, ರಾಜ್ಯಕ್ಕೆ 11,495 ಕೋಟಿ ರೂ. ನಿರ್ದಿಷ್ಟ ಅನುದಾನ ಒದಗಿಸಲು ಶಿಫಾರಸ್ಸು ಮಾಡಿದೆ. ಆದರೆ ಕೇಂದ್ರ ಸರ್ಕಾರ ಆಯೋಗದ ಈ ಶಿಫಾರಸ್ಸನ್ನು ಒಪ್ಪಿಕೊಂಡಿಲ್ಲ. ಆದ್ದರಿಂದ ಕರ್ನಾಟಕ ಈ ಅನುದಾನ ಪಡೆಯುವಲ್ಲಿಯೂ ವಂಚಿತವಾಗಿದೆ. ಈ ಎಲ್ಲಾ ಕಾರಣಗಳಿಂದ 15 ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಒಟ್ಟು 79770ಕೋಟಿ ರೂ. ನಷ್ಟ ಉಂಟಾಗಿದೆ ಅಂತ ಅಂಕಿಅಂಶಗಳನ್ನ ಆಯೋಗದ ಮುಂದಿಟ್ಟರು.
15ನೇ ಹಣಕಾಸು ಆಯೋಗದ ಅವಧಿಯಲ್ಲಿ ಇತರ ರಾಜ್ಯಗಳಿಗೆ ಪ್ರತಿ ವರ್ಷ 35 ಸಾವಿರ ರೂ. ನಿಂದ 40 ಸಾವಿರ ಕೋಟಿ ರೂ. ಇತರ ರಾಜ್ಯಗಳಿಗೆ ಆದಾಯ ವರ್ಗಾವಣೆ ಮಾಡಿರುವುದನ್ನು ಕರ್ನಾಟಕ ಗಮನಿಸಿದೆ. ಇದು ಜಿಎಸ್ಡಿಪಿಯ ಶೇ.1.8ರಷ್ಟಿದೆ. ರಾಜ್ಯದಿಂದ ಹೊರಗೆ ವರ್ಗಾವಣೆಯಾಗುತ್ತಿರುವ ಈ ಮೊತ್ತ ರಾಜ್ಯದ ಒಟ್ಟು ಆದಾಯದ ಶೇ.50ರಿಂದ 55ರಷ್ಟಾಗಿದೆ. ಈ ರೀತಿ ಪಾಲಿನ ಪರಿಗಣನೆಯಲ್ಲಿನ ಅಸಮತೋಲನದಿಂದಾಗಿ ಆರ್ಥಿಕವಾಗಿ ಹಾಗೂ ಜನಸಂಖ್ಯೆ ನಿಯಂತ್ರಣ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಕರ್ನಾಟಕ ಹಾಗೂ ಈ ರೀತಿಯ ರಾಜ್ಯಗಳು ದಂಡ ಎದುರಿಸುವಂತಾಗಿದೆ. ಸೆಸ್ ಮತ್ತು ಸರ್ಚಾರ್ಜ್ ಕೇಂದ್ರ ಮತ್ತು ರಾಜ್ಯಗಳ ನಡುವೆ ಹಂಚಿಕೊಳ್ಳುವ ಬಾಬ್ತಿನಲ್ಲಿ ಬರುವುದಿಲ್ಲ. ವರ್ಷದಿಂದ ವರ್ಷಕ್ಕೆ ಕೇಂದ್ರ ಸರ್ಕಾರ ಸೆಸ್ ಮತ್ತು ಸರ್ಚಾರ್ಜ್ ಮೇಲಿನ ಅವಲಂಬನೆಯನ್ನು ನಿರಂತರವಾಗಿ ಹೆಚ್ಚಿಸುತ್ತಾ ಬಂದಿದೆ. ಇದರಿಂದಾಗಿ ಒಟ್ಟು ತೆರಿಗೆ ಆದಾಯಕ್ಕೆ ಅನುಗುಣವಾಗಿ ಕೇಂದ್ರ ಹಾಗೂ ರಾಜ್ಯಗಳ ನಡುವೆ ಹಂಚಿಕೊಳ್ಳಬಹುದಾದ ಬಾಬ್ತಿನ ಪ್ರಮಾಣ ಹೆಚ್ಚಾಗುತ್ತಿಲ್ಲ. ಇದರಿಂದಾಗಿ ರಾಜ್ಯಗಳಿಗೆ ಬಹಳಷ್ಟು ನಷ್ಟ ಉಂಟಾಗುತ್ತಿದೆ ಅಂತ ಆಯೋಗದ ಗಮನಕ್ಕೆ ತಂದರು