ಬೆಂಗಳೂರು: ಜಾತಿ ನಿಂದನೆ ಪ್ರಕರಣ ಎದುರಿಸುತ್ತಿರುವ ಶಾಸಕ ಮುನಿರತ್ನ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತ, ಹಿಂದುಳಿದ ಸಮುದಾಯಗಳ ಬಗ್ಗೆ ಬಿಜೆಪಿಗೆ ಯಾವ ರೀತಿಯ ದ್ವೇಷ ಇದೆ ಎಂಬುದಕ್ಕೆ ಮುನಿರತ್ನ ಅವರ ಮಾತುಗಳೇ ಸಾಕ್ಷಿ ಎಂದು ಟೀಕಿಸಿದ್ದಾರೆ.
ಇದೇ ವೇಳೆ ಬಿಜೆಪಿ ನಾಡಿನ ದಲಿತರ ಕ್ಷಮೆ ಕೇಳಿ ಶಾಸಕ ಮುನಿರತ್ನ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಶಾಸಕ ಮುನಿರತ್ನ ಅವರು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬವರ ಜೊತೆ ಮಾತನಾಡಿದ್ದಾರೆ ಎನ್ನಲಾಗುತ್ತಿರುವ ವೈರಲ್ ಆಡಿಯೋ ಉಲ್ಲೇಖಿಸಿ ಬಿಜೆಪಿಯ ಹಿಂದುತ್ವದ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದಾರೆ. ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.