ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ರಾಜ್ಯದಾದ್ಯಂತ ನಾಳೆ ಕರೆ ನೀಡಿದ್ದ ಮುಷ್ಕರಕ್ಕೆ ಬೆಂಗಳೂರಿನ ಹೈಕೋರ್ಟ್ ಬ್ರೇಕ್ ನೀಡಿದೆ.
ಸಾರ್ವಜನಿಕ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠದ ಮುಂದೆ, ಸರ್ಕಾರದ ಪರ ವಕೀಲೆ ಪ್ರತಿಮಾ ಹೊನ್ನಾಪುರ ಅವರು, ಮಾರ್ಚ್ 20ರಂದು ಕಾರ್ಮಿಕ ಇಲಾಖೆಯ ಆಯುಕ್ತರು ಸಾರಿಗೆ ನೌಕರರ ಸಂಘಟನೆಗಳೊಂದಿಗೆ ಸಭೆ ನಡೆಸಿದ್ದರು. ಆದ್ರೇ ಈ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ.
ಏಪ್ರಿಲ್ 6ರಂದು ಮುಂದಿನ ಸಭೆಯನ್ನು ನಿಗದಿಪಡಿಸಲಾಗಿದೆ ಎಂದರು. ನಾಳೆ ಸಾರಿಗೆ ನೌಕರರು ಮುಷ್ಕರ ನಡೆಸಿದರೇ ಸಾರ್ವಜನಿಕರಿಗೆ ತೊಂದರೆ ಆಗಲಿದೆ. ವಿದ್ಯಾರ್ಥಿಗಳು, ಪ್ರಯಾಣಿಕರು ಸಂಕಷ್ಟ ಎದುರಿಸುವಂತೆ ಆಗಿದೆ ಎಂಬುದಾಗಿ ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.
ಈ ಹಿನ್ನಲೆಯಲ್ಲಿ ಹೈಕೋರ್ಟ್ 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಆದೇಶ ಹೊರಡಿಸಿದೆ. ಈ ಮೂಲಕ ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಬ್ರೇಕ್ ಹಾಕಿದೆ.