ಹಾವೇರಿ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಾಕ್ ನೀಡಿದ್ದು, ಪಕ್ಷದಿಂದ ಹೊರಬಂದಿದ್ದಾರೆ. ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂಎಂ ಹಿರೇಮಠ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಕೇವಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಕೂಡ ಎಂಎಂ ಹಿರೇಮಠ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಪ್ರತಿಯನ್ನು ಮಲ್ಲಿಕಾರ್ಜುನ್ ಖರ್ಗೆ, ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ಗೆ ರವಾನಿಸಿದ್ದಾರೆ. ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿ ಎರಡೇ ದಿನಕ್ಕೆ ಈ ಬೆಳವಣಿಗೆ ನಡೆದಿದ್ದು, ಹಾವೇರಿಯಲ್ಲಿ ಕಾಂಗ್ರೆಸ್ಗೆ ಹಿನ್ನಡೆ ಆಗುತ್ತದೆ ಎನ್ನಲಾಗುತ್ತಿದೆ.
ಎಂಎಂ ಹಿರೇಮಠ ಅವರು ಹಾವೇರಿ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಅಲ್ಲದೇ ಬೇಡ ಜಂಗಮ ಜಾತಿ ಪ್ರಮಾಣ ಪತ್ರವನ್ನು ಪಡೆದಿದ್ದರು ಎನ್ನಲಾಗಿದೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ಕುರಿತು ಯಾವುದೇ ಸಕಾರಾತ್ಮಕ ಸ್ಪಂದನೆ ನೀಡಿಲ್ಲ. ಅದಲ್ಲದೇ ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರ ಹೆಸರನ್ನು ಹಾವೇರಿ ಕ್ಷೇತ್ರಕ್ಕೆ ಕಾಂಗ್ರೆಸ್ ಘೋಷಿಸಿದೆ. ಈ ಹಿನ್ನೆಲೆ ಬೇಸತ್ತು ಹಿರೇಮಠ ತಮ್ಮ ಜಿಲ್ಲಾಧ್ಯಕ್ಷ ಸ್ಥಾನ ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು, ಕಾಂಗ್ರೆಸ್ಗೆ ರಾಜೀನಾಮೆ ನೀಡಿರುವ ಎಂಎಂ ಹಿರೇಮಠ ಅವರು ಬಿಜೆಪಿ ಅಥವಾ ಜೆಡಿಎಸ್ ಸೇರ್ತಾರಾ ಎಂಬುದನ್ನು ಕಾದುನೋಡಬೇಕಿದೆ. ಬಿಜೆಪಿಯಿಂದ ಇಲ್ಲಿ ಹಾಲಿ ಶಾಸಕ ನೆಹರು ಓಲೇಕಾರ್ ಇದ್ದು, ಬಿಜೆಪಿಯಲ್ಲಿ ಎಂಎಂ ಹಿರೇಮಠಗೆ ಟಿಕೆಟ್ ಸಿಗುವುದು ಡೌಟ್ ಎನ್ನಲಾಗಿದ್ದು, ಜೆಡಿಎಸ್ಗೆ ಸೇರುವ ಸಾಧ್ಯತೆಗಳು ಹೆಚ್ಚಿವೆ.