ಕೆ.ಆರ್.ಪುರ: ರಾಜ್ಯ ವಿಧಾನಸಭೆ ಚುನಾವಣೆ ಅತ್ತಿರವಾಗುತ್ತಿದ್ದಂತೆ ರಾಜಕೀಯ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿ ಬರುತ್ತಿವೆ. ನಗರಾಭಿವೃದ್ಧಿ ಸಚಿವರು ತಮ್ಮ ಕ್ಷೇತ್ರದಲ್ಲಿ ಕಾಮಗಾರಿ ಕೈಗೊಳ್ಳದೇ 97 ಕೋಟಿ ರೂಪಾಯಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ಮಾಡಿರುವ ಆರೋಪಕ್ಕೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ಸ್ಟಷ್ಟನೆ ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ಮೇಲೆ ಮಾಡಿರುವ ಆರೋಪಗಳು ಶುದ್ಧ ಸುಳ್ಳಾಗಿವೆ. ಚುನಾವಣೆ ಸಮೀಪಿಸುತ್ತಿರುವುದರಿಂದ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಪ್ರಾಮಾಣಿಕವಾಗಿ ನನ್ನ ಕ್ಷೇತ್ರದಲ್ಲಿ ಜವಾಬ್ದಾರಿಯುತನಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಎಲ್ಲಿಯೂ ಕೂಡ ಲೋಪವಾಗಿಲ್ಲ. ಸುಖಾಸುಮ್ಮನೆ ನನ್ನ ಮೇಲೆ ಆಪಾದನೆ ಮಾಡುವ ಕೆಲಸವಾಗುತ್ತಿದೆ ಎಂದು ಹೇಳಿದರು.
ಒಂದು ವೇಳೆ ಲೋಪವಾಗಿದ್ದರೆ ನಾನು ಹೇಗೆ ಜವಾಬ್ದಾರಿಯಾಗುತ್ತೇನೆ. ಅದಕ್ಕಾಗಿ ಅಧಿಕಾರಿಗಳು ಇರುತ್ತಾರೆ. ಕ್ಷೇತ್ರಕ್ಕೆ ಅನುದಾನ ತರುವ ಕೆಲಸ ನನ್ನದು. ಕೆಲಸವಾಗದಿದ್ದರೆ ತಕ್ಷಣಕ್ಕೆ ಗಮನಕ್ಕೆ ತಂದಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬಹುದಿತ್ತು. ಈಗ ಲೋಪವಾಗಿದೆ ಆರೋಪಿಸಲಾಗುತ್ತಿದೆ ಎಂದು ತಿಳಿಸಿದರು.
ಚುನಾವಣೆ ಹತ್ತಿರ ಬರುತ್ತಿರುವುದರಿಂದ ಈ ರೀತಿ ಕುತಂತ್ರ ಮಾಡಲಾಗಿದ್ದು, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಿದ್ದು ನನಗೆ ತೀವ್ರ ಬೇಸರ ತರಿಸಿದೆ ಎಂದರು. ಇದಕ್ಕೆಲ್ಲಾ ಮುಂದಿನ ಚುನಾವಣೆಯಲ್ಲಿ ಜನರೇ ಪಾಠ ಕಲಿಸುವ ಮೂಲಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.