ತುಮಕೂರು: ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಕೆಳಕ್ಕೆ ಬಿದ್ದು ಪೊಟರೆಗೆ ಸಿಲುಕಿಕೊಂಡ ಘಟನೆ ನಡೆದಿತ್ತು. ಕ್ಷಣಾ ಕಾರ್ಯಾಚರಣೆ ಮುಂದುವರಿಸಿದ ಸಿಬ್ಬಂದಿ, ಸೋಮವಾರ ಆಕೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. 12 ಗಂಟೆಗಳ ಕಾರ್ಯಾಚರಣೆ ಬಳಿಕ ಯುವತಿ ಬದುಕಿ ಬಂದಿದ್ದಾರೆ. ಹೌದು ಹಂಸ (19) ಆಪತ್ತಿಗೆ ಸಿಲುಕಿದ್ದ ವಿದ್ಯಾರ್ಥಿನಿ.
ಗುಬ್ಬಿ ತಾಲೂಕು ಶಿವರಾಂಪುರದ ನಿವಾಸಿ ಸೋಮನಾಥ್ ಅವರ ಪುತ್ರಿ ಹಂಸ ಅವರು ನಗರದ ಎಸ್ಐಟಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದಾರೆ. ಮೈದಾಳ ಕೆರೆ ಕೋಡಿ ಬಿದ್ದಿರುವುದನ್ನು ನೋಡಲು ತೆರಳಿದ್ದ ಯುವತಿ, ನೀರು ಹರಿಯುವ ಸ್ಥಳದಲ್ಲಿ ನಿಂತು ಸೆಲ್ಫಿ ಫೋಟೋ ತೆಗೆದುಕೊಳ್ಳಲು ಹೋಗಿದ್ದಾರೆ. ಕೆರೆ ಕೋಡಿಯಲ್ಲಿ ಕಾಲು ಜಾರಿ ಬಿದ್ದು ಕಲ್ಲಿನ ಪೊಟರೆಯೊಳಗೆ ಸಿಲುಕಿಕೊಂಡಿದ್ದರು.
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತಡ ರಾತ್ರಿವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು. ಆದರೆ ಆಕೆ ಸಿಲುಕಿರುವ ಜಾಗಕ್ಕೆ ಹೋಗುವುದು ಸವಾಲಿನ ಕೆಲಸವಾಗಿತ್ತು. ಹತ್ತಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಭಾನುವಾರ ರಕ್ಷಣಾ ಕಾರ್ಯ ಸ್ಥಗಿತಗೊಳಿಸಿದ್ದ ಅಗ್ನಿಶಾಮಕ ಸಿಬ್ಬಂದಿ, ಸೋಮವಾರ ಘಟನೆ ನಡೆದ ಮಂದಾರಗಿರಿ ಬೆಟ್ಟದ ಬಳಿ ಮೈದಾಳ ಕೆರೆ ಕೋಡಿ ಸ್ಥಳಕ್ಕೆ ಮತ್ತೆ ತೆರಳಿದ್ದು, ಬೆಳಿಗ್ಗೆಯಿಂದ ರಕ್ಷಣಾ ಕಾರ್ಯಾಚರಣೆ ಪುನಾರಂಭಿಸಿದ್ದರು. ಹಂಸ ಅವರ ತಂದೆ ಸೋಮನಾಥ್, ತಾಯಿ ರಾಧಾ ಮತ್ತು ಸಹೊದರ ಹರ್ಷ ಕೂಡ ಸ್ಥಳಕ್ಕೆ ದೌಡಾಯಿಸಿದ್ದರು.
ಕೋಡಿ ಹರಿಯುವ ಭಾಗದಲ್ಲಿ ಸುಮಾರು ಹದಿನೈದು ಅಡಿ ಆಳದಲ್ಲಿರುವ ಕಲ್ಲಿನ ಬಂಡೆ ನಡುವೆ ಹಂಸ ಸಿಲುಕಿರಬಹುದು ಎಂದು ಶಂಕಿಸಲಾಗಿತ್ತು. ಅದೀಗ ನಿಜವಾಗಿದೆ. ಕೋಡಿ ನೀರು ರಭಸದಿಂದ ಹರಿಯುತ್ತಿರುವ ಕಾರಣ, ಆಕೆಯ ಪತ್ತೆ ಹಾಗೂ ರಕ್ಷಣೆಗೆ ತೊಡಕಾಗಿತ್ತು. ಕೆರೆ ಕೊಡಿಯ ನೀರನ್ನು ಬೇರೆಡೆಗೆ ತಿರುಗಿಸುವ ಮೂಲಕ, ಆಕೆ ಸಿಲುಕಿದ್ದ ಕಲ್ಲಿನ ಪೊಟರೆಯ ಜಾಗಕ್ಕೆ ನೀರು ಹೋಗದಂತೆ ನೋಡಿಕೊಂಡು, ಬಳಿಕ ರಕ್ಷಣಾ ಕಾರ್ಯವನ್ನು ಯಶಸ್ವಿಯಾಗಿ ನಡೆಸಲಾಯಿತು. ಅದೃಷ್ಟವಶಾತ್ ಆ ಭಾಗದಲ್ಲಿ ಮುಂಡಿಯುದ್ದಕ್ಕಷ್ಟೇ ನೀರಿತ್ತು. ಹಾಗಾಗಿ ಹಂಸಾಳಿಗೆ ತೊಂದರೆಯಾಗಿಲ್ಲ. ರಕ್ಷಣೆ ಮಾಡಿದ ಬಳಿಕ ಹಂಸಾಳನ್ನು ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.