ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದೆ. ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ದೀಪಾವಳಿ ಜಾತ್ರೆಗೆ ಲಕ್ಷಾಂತರ ಮಂದಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ.
ಈ ಹಿನ್ನಲೆಯಲ್ಲಿ ಟ್ರಾಫಿಕ್ ಜಾಮ್ ತಡೆಗಟ್ಟಲು ಇಂದಿನಿಂದ ನ.2 ರ ಸಂಜೆ 6 ಗಂಟೆಯವರೆಗೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಬರುವ ಭಕ್ತರಿಗೆ ಕೌದಳ್ಳಿಯಲ್ಲಿ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು,ಇಲ್ಲಿಂದ ಕೆಎಸ್ಆರ್ಟಿಸಿ ಬಸ್ ಮುಖಾಂತರ ಮಹದೇಶ್ವರ ಬೆಟ್ಟಕ್ಕೆ ತೆರಳಲು ವ್ಯವಸ್ಥೆ ಕಲ್ಪಿಸಲಾಗಿದೆ. ಅ.31 ರಿಂದ ನ.2ರ ವರೆಗೆ ದೀಪಾವಳಿ ಹಬ್ಬ ನಡೆಯಲಿದೆ.
ದೇಶಾದ್ಯಂತ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಬ್ಬದ ಸಂದರ್ಭದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.