ಶ್ರೀನಗರ ಯಾತ್ರಿಕರಿದ್ದ ಬಸ್ವೊಂದು ಕಂದಕಕ್ಕೆ ಉರುಳಿ ಬಿದ್ದಿದ್ದು ಮೃತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಇನ್ನೂ ಘಟನೆಯಲ್ಲಿ 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಘಟನೆ ಸಂಭವಿಸಿದ ಕೆಲವೇ ಸಮಯದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಹತ್ರಾಸ್ನಿಂದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಜಮ್ಮುವಿನ ಅಖ್ನೂರ್ ತಾಂಡಾ ಬಳಿ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಜಮ್ಮುವಿನ ಉಪಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
2 ಲಕ್ಷರೂ. ಪರಿಹಾರಘೋಷಿಸಿದಮೋದಿ:
ಇನ್ನೂ ಘಟನೆ ನೆನೆದು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಖ್ನೂರ್ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿ ಅತೀವವಾದ ನೋವನ್ನುಂಟು ಮಾಡಿದೆ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ ಸಂತಾಪ ಸೂಚಿಸಿದ್ದಾರೆ.
ಜೆ&ಕೆರಾಜ್ಯಪಾಲರಿಂದ 5 ಲಕ್ಷರೂ. ಪರಿಹಾರಘೋಷಣೆ:
ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ತಲಾ 2 ಲಕ್ಷ ರೂ. ಹೊರತುಪಡಿಸಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಸಹ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.