ಬೆಂಗಳೂರು ;- ಡ್ರೋನ್ ಬಳಸಿ ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣ ಮಾಡಲಾಗುತ್ತದೆ ಎಂದು ಸಚಿವ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಸಂಚಾರ ವಿಭಾಗದ ಪೊಲೀಸರಿಗೆ ಮೂರು ತಿಂಗಳ ಅವಧಿಯಲ್ಲಿ ಬೆಂಗಳೂರು ನಗರವನ್ನು ‘ಸಂಚಾರ ಸಮಸ್ಯೆ ಮುಕ್ತ’ವಾಗಿಸುವ ಗುರಿ ನೀಡಲಾಗಿದ್ದು, ಇನ್ಮುಂದೆ ರಸ್ತೆಗಳಲ್ಲಿ ಡ್ರೋನ್ ಕ್ಯಾಮರಾಗಳನ್ನು ಬಳಸಿ ಸಂಚಾರ ದಟ್ಟಣೆ ತಗ್ಗಿಸಲಾಗುವುದು ಎಂದರು.
ಬೆಂಗಳೂರಿನಲ್ಲಿ ಸಂಚಾರ ಸಮಸ್ಯೆಯು ಮೂಲಭೂತ ಸಮಸ್ಯೆಯಾಗಿದೆ. ಸಂಚಾರ ದಟ್ಟಣೆಯಿಂದ ಜಾಗತಿಕ ಮಟ್ಟದಲ್ಲಿ ನಗರಕ್ಕೆ ಅಪಕೀರ್ತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಂಚಾರ ಸಮಸ್ಯೆ ನಿವಾರಣೆಗೆ ಕಾಲಮಿತಿ ನಿಗದಿಪಡಿಸಲಾಗಿದೆ. ಇನ್ನು ಮೂರು ತಿಂಗಳಲ್ಲಿ ಬೆಂಗಳೂರು ನಗರವನ್ನು ಸಂಚಾರ ಮುಕ್ತವಾಗಿಸುವ ನಿಟ್ಟಿನಲ್ಲಿ ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಪ್ರತಿ ದಿನ ಪಿಕ್ ಅವರ್ನಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆ ಎರಡು ಗಂಟೆಗಳು ಡಿಸಿಪಿ ಆದಿಯಾಗಿ ಸಂಚಾರ ವಿಭಾಗದ ಎಲ್ಲ ಪೊಲೀಸರು ರಸ್ತೆಯಲ್ಲಿ ನಿಂತು ಸಂಚಾರ ನಿರ್ವಹಣೆ ಮಾಡಬೇಕು. ಸಂಚಾರ ದಟ್ಟಣೆ ಉಂಟಾದರೆ ಡಿಸಿಪಿ ಹಾಗೂ ಎಸಿಪಿ ಅವರನ್ನು ಸಹ ಹೊಣೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.