ಮಂಡ್ಯ :- ಆತಗೂರು ಹೋಬಳಿಯ ರೀ ಸರ್ವೆಯಲ್ಲಿ ಉಂಟಾಗಿರುವ ಲೋಪವನ್ನು ಸರಿಪಡಿಸಲು ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಭರವಸೆ ನೀಡಿದರು.
ಮದ್ದೂರು ತಾಲೂಕಿನ ಕೆಸ್ತೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ದೊಡ್ಡ ಅಂಕನಹಳ್ಳಿ, ಚಿಕ್ಕ ಅಂಕನಹಳ್ಳಿ, ನವಿಲೆ, ಹೂತಗೆರೆ, ಕುರುಬರದೊಡ್ಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಜನ ಸಂಪರ್ಕ ಸಭೆ ಹಾಗೂ ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಸುಮಾರು 20 ವರ್ಷಗಳಿಂದ ಆತಗೂರು ಹೋಬಳಿಯಲ್ಲಿ ರೀ ಸರ್ವೆ ಸಮಸ್ಯೆಯಿಂದ ರೈತರು ಹಾಗೂ ಗ್ರಾಮಸ್ಥರಿಗೆ ತೊಂದರೆ ಉಂಟಾಗಿರುವುದು ನನ್ನ ಗಮನಕ್ಕೆ ಬಂದಿದ್ದು, ಈ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಹಲವು ಬಾರಿ ಚರ್ಚಿಸಲಾಗಿದ್ದು, ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಪ್ರತಿ ಗ್ರಾಮಗಳಿಗೆ ತೆರಳಿ ರೀ ಸರ್ವೆ ಸಮಸ್ಯೆಯನ್ನು ಹಂತ ಹಂತವಾಗಿ ಸರಿಪಡಿಸಲಾಗುವುದು ಎಂದು ಹೇಳಿದರು.
ಕ್ಷೇತ್ರದಲ್ಲಿ ಬೆಟ್ಟದಷ್ಟು ವಿವಿಧ ಸಮಸ್ಯೆಗಳಿದ್ದು, ಪ್ರತಿ ಗ್ರಾಮಗಳಲ್ಲೂ ಕುಡಿಯುವ ನೀರು, ರಸ್ತೆ, ವಿದ್ಯುತ್, ಹಾಗೂ ಚರಂಡಿ ಸೇರಿದಂತೆ ಮೂಲ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸರ್ಕಾರದಿಂದ ವಿಶೇಷ ಅನುದಾನ ತಂದು
ಹಂತ ಹಂತವಾಗಿ ಆಧ್ಯತೆ ಮೇರೆಗೆ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಇದೇ ವೇಳೆ ಚಿಕ್ಕ ಅಂಕನಹಳ್ಳಿ ಗ್ರಾಮಸ್ಥರು ಗ್ರಾಮದ ಸುತ್ತ ಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಚಿರತೆ ಹಾವಳಿ ಹೆಚ್ಚಿದೆ. ಇದರಿಂದ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗೆ ಹೋಗಲು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಕಡೆಮೆಯಾಗುವುದರ ಜೊತೆಗೆ ಗ್ರಾಮಸ್ಥರು ಭಯದಿಂದ ದಿನದೂಡಬೇಕಾದ ಅನಿವಾರ್ಯತೆ ಎದುರಾಗಿರುವುದರಿಂದ ಶಾಸಕರು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ ಗ್ರಾಮಸ್ಥರು ಮನವಿ ಮಾಡಿದರು. ಸ್ಥಳದಲ್ಲಿದ್ದ ವಲಯ ಅರಣ್ಯಾಧಿಕಾರಿ ಗವಿಯಪ್ಪ ಅವರಿಗೆ ಚಿರತೆ ಸೆರೆಹಿಡಿಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು.
ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರುವುದರಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂದು ರೂಪುರೇಷೆಗಳನ್ನು ಸಿದ್ದಪಡಿಸಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ ತಾ.ಪಂ ಇಓ ಸಂದೀಪ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಕೆ.ಎಂ.ರೇಖಾ, ಸಿಡಿಪಿಓ ನಾರಾಯಣ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪರಮೇಶ್, ಪಿಡಿಓ ಸಂದೀಪ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಮುಖಂಡರಾದ ಕೆ.ಟಿ.ರಾಜಣ್ಣ, ಶಂಕರಲಿಂಗಯ್ಯ, ಬಿಳಿಯಪ್ಪ, ರಾಮಲಿಂಗಯ್ಯ, ತಮ್ಮಯ್ಯ, ಸತೀಶ್, ತಿಮ್ಮೇಗೌಡ, ಯತೀಶ್, ಯರಗನಹಳ್ಳಿ ಹರೀಶ್, ಶಿವು ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್ ಮಂಡ್ಯ