ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಕೊನೆಗೂ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಘಟನೆ ನಡೆದು 100 ದಿನ ಕಳೆದಿದ್ರು ದರ್ಶನ್ ಯಾಕೆ ಜಾಮೀನಿಗೆ ಅರ್ಜಿ ಸಲ್ಲಿಸುತ್ತಿಲ್ಲ ಎಂದು ಹಲವರು ಪ್ರಶ್ನಿಸುತ್ತಿದ್ದರು. ಇದೀಗ ಚಾರ್ಜ್ ಶೀಟ್ ಸಲ್ಲಿಸಿ ಕೆಲ ದಿನಗಳ ಬಳಿಕ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲವು ಆರೋಪಿಗಳು ಈಗಾಗಲೇ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿಗಳು ತಿರಸ್ಕೃತಗೊಂಡಿವೆ. ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ಎರಡನೇ ಬಾರಿಗೆ ಜಾಮೀನು ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಆದರೆ ದರ್ಶನ್ ಮಾತ್ರ ಈವರೆಗೆ ಜಾಮೀನು ಅರ್ಜಿ ಸಲ್ಲಿಸಿರಲಿಲ್ಲ. ಇದೀಗ ಕೊನೆಗೂ ದರ್ಶನ್ ಜಾಮೀನಿಗೆ ಅರ್ಜಿ ಹಾಕಿದ್ದಾರೆ.
ಪ್ರಕರಣದ ಆರೋಪ ಪಟ್ಟಿ ಸಲ್ಲಿಕೆಯಾಗಿ ಎರಡು ವಾರಕ್ಕೂ ಹೆಚ್ಚು ಸಮಯವಾಗಿದ್ದು, ತುಸು ಹೆಚ್ಚೇ ಸಮಯ ತೆಗೆದುಕೊಂಡು ದರ್ಶನ್, ತಮ್ಮ ವಕೀಲರ ಕಡೆಯಿಂದ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸೆಷನ್ಸ್ ಕೋರ್ಟ್ನಲ್ಲಿ ದರ್ಶನ್ ರ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ಇಂದೇ ದರ್ಶನ್ರ ಜಾಮೀನು ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಹೆಚ್ಚಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದು, ಕೊಲೆಗೆ ಪವಿತ್ರಾ ಮತ್ತು ದರ್ಶನ್ ಅವರುಗಳೇ ನೇರ ಕಾರಣ ಎಂದು ಪೊಲೀಸರ ತನಿಖೆ ಹೇಳುತ್ತಿದೆ. ದರ್ಶನ್ ಪ್ರಭಾವದಿಂದಲೇ ಅಪಹರಣ ಮತ್ತು ಕೊಲೆಯಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ದರ್ಶನ್ಗೆ ಜಾಮೀನು ಸಿಗುವುದು ಕಷ್ಟ ಎನ್ನಲಾಗುತ್ತಿದೆ. ಇದರ ನಡುವೆ, ದರ್ಶನ್ಗೆ ಕೊಲ್ಲುವ ಉದ್ದೇಶ ಇರಲಿಲ್ಲ, ಅಚಾನಕ್ಕಾಗಿ ಘಟನೆ ನಡೆದಿದೆ ಅಲ್ಲದೆ ರೇಣುಕಾ ಸ್ವಾಮಿ ಸತ್ತಾಗ ದರ್ಶನ್ ಸ್ಥಳದಲ್ಲಿರಲಿಲ್ಲ ಎಂಬ ಮಾತುಗಳು ಸಹ ಕೇಳಿ ಬರುತ್ತಿದ್ದು, ಇದೇ ಆಧಾರದ ಮೇಲೆ ಜಾಮೀನು ಅರ್ಜಿಗೆ ವಕೀಲರು ವಾದಿಸುವ ಸಾಧ್ಯತೆ ಇದೆ.
ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಇಂದೇ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಆದರೆ ಇಂದೇ ದರ್ಶನ್ಗೆ ಜಾಮೀನು ದೊರಕುವುದಿಲ್ಲ ಬದಲಿಗೆ ವಿಚಾರಣೆ ಮುಂದೂಡಲಾಗುವುದು ಎನ್ನಲಾಗುತ್ತಿದೆ. ನ್ಯಾಯಾಧೀಶರಾದ ಜೈಶಂಕರ್ ಅವರು ವಿಚಾರಣೆ ನಡೆಸಲಿದ್ದಾರೆ.