ಲಕ್ನೋ: ಹೃದಯಾಘಾತದಿಂದ ಜೈಲಿನಲ್ಲಿ ಮೃತಪಟ್ಟ ಗ್ಯಾಂಗ್ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವಿನ ತನಿಖೆಯನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ನಡೆಸಬೇಕೆಂದು ಉತ್ತರ ಪ್ರದೇಶದ ಮಾಜಿ ಸಿಎಂ, ಎಸ್ಪಿ ನಾಯಕ ಅಖಿಲೇಶ್ ಯಾದವ್ ಆಗ್ರಹಿಸಿದ್ದಾರೆ.
ಗುರುವಾರ ಹೃದಯಾಘಾತದಿಂದ ಬಂದಾ ವೈದ್ಯಕೀಯ ಕಾಲೇಜಿನಲ್ಲಿ ಅನ್ಸಾರಿ ಸಾವನ್ನಪ್ಪಿದ್ದಾರೆ. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಕಾರಾಗೃಹದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು
ಪೊಲೀಸ್ ಠಾಣೆಯಲ್ಲಿ ಬಂಧಿಸಲ್ಪಟ್ಟಿರುವಾಗ, ಜೈಲಿನೊಳಗೆ ಅನಾರೋಗ್ಯಕ್ಕೆ ಒಳಗಾದಾಗ, ಆಸ್ಪತ್ರೆಗೆ ಕರೆದೊಯ್ಯುವಾಗ, ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ, ಸುಳ್ಳು ಎನ್ಕೌಂಟರ್, ಸುಳ್ಳು ಆತ್ಮಹತ್ಯೆ, ಅಪಘಾತದಲ್ಲಿ ಸಾವು- ಈ ಎಲ್ಲಾ ಪ್ರಕರಣದಲ್ಲಿ ಖೈದಿ ಮೃತಪಟ್ಟಾಗ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸುತ್ತದೆ. ಇಂತಹ ಎಲ್ಲಾ ಅನುಮಾನಾಸ್ಪದ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.
ಅಖಿಲೇಶ್ ಯಾದವ್ ಅಲ್ಲದೇ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿ ಹಲವಾರು ರಾಜಕಾರಣಿಗಳು ಗ್ಯಾಂಗ್ಸ್ಟರ್ ರಾಜಕಾರಣಿಯ ಸಾವಿನ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.