ಮಂಡ್ಯ:- ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳ ನಡುವೆಯೂ 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಮದ್ದೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ತಿಳಿಸಿದರು.
ಮದ್ದೂರು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾರ್ಚ್ 31ರಿಂದ ( ನಾಳೆಯಿಂದ ) ಏಪ್ರಿಲ್ 15ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, 3486 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಮದ್ದೂರು ತಾಲೂಕಿನಲ್ಲಿ ಒಟ್ಟು 88 ಫ್ರೌಡಶಾಲೆಗಳಿದ್ದು, 16 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 1700 ಗಂಡು ಮಕ್ಕಳು, 1648 ಹೆಣ್ಣು ಮಕ್ಕಳು ಒಟ್ಟು 3486 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಹೇಳಿದರು.
ಪರೀಕ್ಷೆಯಲ್ಲಿ ಅಕ್ರಮಕ್ಕೆ ಕಡಿವಾಣ ಹಾಕುವ ಸಲುವಾಗಿ ಎಲ್ಲ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ ಕಡ್ಡಾಯಗೊಳಿಸಲಾಗಿದ್ದು, ಪ್ರತಿ ಕೇಂದ್ರಕ್ಕೆ ಸ್ತಾನಿಕ ಜಾಗೃತ ದಳ ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ಜಿಲ್ಲಾಧಿಕಾರಿಗಳು ನೇಮಕ ಮಾಡಿದ್ದು, ತಾಲ್ಲೂಕು ಹಂತದಲ್ಲಿ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಇಓ ಮತ್ತು ಬಿಇಓ ನೇತೃತ್ವದಲ್ಲಿ ವಿಚಕ್ಷಣ ದಳವನ್ನು ರಚಿಸಲಾಗಿದೆ ಎಂದರು.
ಪ್ರಶ್ನೆಪತ್ರಿಕೆಗಳನ್ನು ಸಕಾಲಕ್ಕೆ ಆಯಾ ಕೇಂದ್ರಗಳಿಗೆ ತಲುಪಿಸುವುದಕ್ಕಾಗಿ ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಎಲ್ಲ ಕೇಂದ್ರಗಳನ್ನು ಶುಚಿಗೊಳಿಸಿ, ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜುಗೊಳಿಸಲಾಗುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪ್ರತಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು
ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಕಾಳೀರಯ್ಯ ಹೇಳಿದರು.
ವರದಿ : ಗಿರೀಶ್ ರಾಜ್ ಮಂಡ್ಯ.