ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿ ಸಹೋದರಿ, ವೈಎಸ್ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ.ಎಸ್.ಶರ್ಮಿಳಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಂಸದ ರಾಹುಲ್ ಗಾಂಧಿ ಸಮ್ಮುಖದಲ್ಲಿ ಸೇರ್ಪಡೆಯಾದರು.
ಸಹೋದರ ವೈಎಸ್ ಜಗನ್ಮೋಹನ್ ರೆಡ್ಡಿ ಜೊತೆಗೆ ಭಿನ್ನಾಭಿಪ್ರಾಯಗಳ ಬಳಿಕ ವೈಎಸ್ಆರ್ ತೆಲಂಗಾಣ ಪಕ್ಷವನ್ನು ಕಟ್ಟಿದ್ದರು. ಇತ್ತಿಚೇಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅವರು ಕಾಂಗ್ರೆಸ್ಗೆ ಬೆಂಬಲ ಘೋಷಿಸಿದ್ದರು. ಈಗ ಅವರು ಕಾಂಗ್ರೆಸ್ಗೆ ಅಧಿಕೃತವಾಗಿ ಸೇರ್ಪಡೆಯಾಗಿ ತಮ್ಮ ಪಕ್ಷವನ್ನು ವಿಲೀನಗೊಳಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ದೇಶದ ಅತಿದೊಡ್ಡ ಜಾತ್ಯತೀತ ಪಕ್ಷವಾಗಿದೆ. ಅದು ಎಲ್ಲಾ ಸಮುದಾಯಗಳಿಗೆ ಅಚಲವಾಗಿ ಸೇವೆ ಸಲ್ಲಿಸುತ್ತದೆ. ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುತ್ತಿದೆ. ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ನೋಡುವುದು ತನ್ನ ತಂದೆಯ ಕನಸಾಗಿತ್ತು.
ಅದಕ್ಕೆ ಕೊಡುಗೆ ನೀಡಲು ಸಂತೋಷಪಡುತ್ತೇನೆ ಎಂದು ಅವರು ಹೇಳಿದ್ದಾರೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರು ಅದನ್ನು ನಾನು ನಿಭಾಯಿಸುತ್ತೇನೆ. ಶೀಘ್ರದಲ್ಲಿ ಲೋಕಸಭೆ ಚುನಾವಣೆಗೆ ಬ್ಲೂ ಪ್ರಿಂಟ್ ತಯಾರಿಸಲಾಗುವುದು ಎಂದು ತಿಳಿಸಿದ್ದಾರೆ.