ರಾಯಚೂರು: ರಾಜ್ಯದಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಬೆಳಕಿಗೆ ಬಂದ ಬಳಿಕ ರಾಜ್ಯದ ಹಲವೆಡೆ ನಿರಂತರವಾಗಿ ಪ್ರಕರಣಗಳು ವರದಿಯಾಗುತ್ತಿವೆ. ಕೆಲ ದಿನಗಳ ಹಿಂದೆ ಕಲಬುರಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಾಣಂತಿಯರು ಪ್ರಾಣ ಕಳೆದುಕೊಂಡಿದ್ದಾರೆ.
ಇದೀಗ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾಳೆ. ರಾಜ್ಯದಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವು ಮುಂದುವರೆದಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಸರಸ್ವತಿ (24) ಮೃತಪಟ್ಟಿದ್ದಾಳೆ.
ಜ.2 ರಂದು ರಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆಯಾಗಿತ್ತು. ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಜ.5 ಸಾವನ್ನಪ್ಪಿದ್ದಾರೆ. ಸದ್ಯ ವೆಂಟಿಲೇಟರ್ನಲ್ಲಿ ಶಿಶುವಿಗೆ ಚಿಕಿತ್ಸೆ ಮುಂದುವರೆದಿದೆ. ನಾಲ್ಕನೇ ಮಗುವಿಗೆ ಜನ್ಮ ನೀಡಿದ್ದ ತಾಯಿ ಸರಸ್ವತಿ ಸಾವಿನಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಒಟ್ಟು 12 ಬಾಣಂತಿಯರು ಮೃತಪಟ್ಟಿದ್ದಾರೆ.