ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ ತಾಲೂಕು ಸಹಿತ 16 ಕಡೆಗಳಲ್ಲಿ ಎನ್ಐಎ (ರಾಷ್ಟ್ರೀಯ ತನಿಖಾ ದಳ) ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಕೇರಳ, ಬಿಹಾರದಲ್ಲೂ ದಾಳಿ ನಡೆದಿದೆ. ಎನ್ಐಎ ಅಧಿಕಾರಿಗಳು ಹಲವು ದಾಖಲೆಗಳ ಪರಿಶೀಲನೆಯನ್ನು ನಡೆಸಿದ್ದು, ಈ ಸಂದರ್ಭ ಹಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ದಾಳಿಮಾಡಿ ಪರಿಶೀಲನೆ ನಡೆಸಿದ್ದಾರೆ.
ಬಿಹಾರದ ಫುಲ್ವಾರಿ ಶರೀಫ್ ಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ನಿಷೇಧಿತ ಪಿಎಫ್ಐ ನಡೆಸುತ್ತಿದ್ದ ಹಲವು ಕೃತ್ಯಗಳಿಗೆ ಸಂಬಂಧಿಸಿದಂತೆ ಎನ್ಐಎ ಕಳೆದ ವರ್ಷದಿಂದಲೇ ತೀವ್ರ ವಿಚಾರಣೆ ನಡೆಸುತ್ತಿದ್ದು, ಇದರ ಮುಂದುವರಿದ ಭಾಗವಾಗಿ ದಾಳಿ ನಡೆದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ್ದು ಸೇರಿ ಹಲವು ವಿಚಾರಗಳಿಗೆ ಈ ಫಂಡಿಂಗ್ ನಡೆಯುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಹಿನ್ನೆಲೆ ಬುಧವಾರ 16 ಕಡೆಗಳಲ್ಲಿ ವಿಚಾರಣೆಗಾಗಿ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.