ನವದೆಹಲಿ: ಅಸ್ಸಾಂನಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಹತ್ತು ತಂಡಗಳನ್ನು ನಿಯೋಜಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ಡಿಆರ್ಎಫ್) 120ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಪ್ರವಾಹಕ್ಕೆ ಸಿಲುಕಿದ್ದಾರೆ. ಆದರೆ ನೀರಿನ ಮಟ್ಟವು ಇಂದು ಕಡಿಮೆಯಾಗಲು ಪ್ರಾರಂಭಿಸಿದೆ.
“ಅಸ್ಸಾಂನಲ್ಲಿ ಒಟ್ಟು ಹತ್ತು ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದ್ದು, ಈ ತಂಡಗಳು ತಗ್ಗು ಪ್ರದೇಶಗಳಿಂದ ರಕ್ಷಣಾ ಮತ್ತು ಸ್ಥಳಾಂತರಿಸುವಿಕೆ ಕಾರ್ಯಾಚರಣೆ ನಡೆಸುತ್ತಿದ್ದು, ಇಲ್ಲಿಯವರೆಗೆ, 123 ವ್ಯಕ್ತಿಗಳು ಮತ್ತು ಹಲವಾರು ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ” ಎಂದು ಎನ್ಡಿಆರ್ಎಫ್ ವಕ್ತಾರರು ತಿಳಿಸಿದ್ದಾರೆ.
ಪ್ರತಿ NDRF ತಂಡವು ಸುಮಾರು 35-40 ಸಿಬ್ಬಂದಿಯನ್ನು ಹೊಂದಿದ್ದು, ಈ ತಂಡಗಳು ಪರಿಹಾರ ಸಾಮಗ್ರಿ ವಿತರಣೆಯಲ್ಲಿ ಸ್ಥಳೀಯ ಅಧಿಕಾರಿಗಳಿಗೆ ಸಹಾಯ ಮಾಡುತ್ತಿವೆ ಎಂದು ವಕ್ತಾರರು ಹೇಳಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ತಗ್ಗು ಪ್ರದೇಶಗಳಲ್ಲಿ ತಂಡಗಳು ವಿಚಕ್ಷಣಾ ಕಾರ್ಯ ನಡೆಸುತ್ತಿವೆ ಅವರು ತಿಳಿಸಿದ್ದಾರೆ.