ಬೆಂಗಳೂರು: 31 ವರ್ಷದ ಬಳಿಕ ಅಯೋಧ್ಯೆ ಕೇಸ್ಗೆ ಮರು ಜೀವ ಕೊಟ್ಟು ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಅವರ ಬಂಧನಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ರಾಜ್ಯದಲ್ಲಿರೋದು ಹಿಂದೂ ವಿರೋಧಿ ಸರ್ಕಾರ. ನಾಳೆ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಹೋರಾಟಕ್ಕೆ ಕರೆ ನೀಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ಇದು 5 ಅಥವಾ 10 ವರ್ಷದ ಹಳೆಯ ಪ್ರಕರಣ ಇದಲ್ಲ. 31 ವರ್ಷದ ಹಳೆಯ ಪ್ರಕರಣಕ್ಕೆ ಮರು ಜೀವ ಕೊಟ್ಟಿದ್ದಾರೆ. ಶ್ರೀಕಾಂತ್ ಪೂಜಾರಿ ಅವರನ್ನು ಬಂಧನಕ್ಕೆ ಒಳಪಡಿಸಿರುವುದು ಸರಿಯಲ್ಲ. ಇದನ್ನು ಖಂಡಿಸುತ್ತೇನೆ ಎಂದರು. ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲೂ ಪ್ರತಿಭಟನೆ ನಡೆಸಲಾಗುವುದು. ಹಾಗೆಯೇ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಹೋರಾಟಕ್ಕೆ ಕರೆ ಕೊಟ್ಟಿರುವುದಾಗಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ರಾಮಮಂದಿರ ಹೋರಾಟಗಾರರ ವಿರುದ್ಧ ಕ್ರಮವನ್ನು ಖಂಡಿಸಿರುವ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ನಾಳೆ ಹುಬ್ಬಳ್ಳಿಗೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ಭೇಟಿ ನೀಡುತ್ತಿದ್ದು, ಹಿಂದೂ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಲಿದ್ದಾರೆ.