ವ್ಯಾಪಕ ಪ್ರತಿಭಟನೆ ಬಳಿಕ ಬಾಂಗ್ಲಾದೇಶದಿಂದ ಏಕಾಏಕಿ ಪಲಾಯಗೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ. ಕಳೆದ ತಿಂಗಳು ನಡೆದ ಹಿಂಸಾತ್ಮಕ ಘರ್ಷಣೆಯ ಸಮಯದಲ್ಲಿ ಕಿರಾಣಿ ಅಂಗಡಿ ಮಾಲೀಕನ ಸಾವಿನ ಹಿನ್ನೆಲೆಯಲ್ಲಿ ಶೇಖ್ ಹಸೀನಾ ಮತ್ತಿತರ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ವಿವಾದಾತ್ಮಕ ಉದ್ಯೋಗ ಮೀಸಲಾತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಅವಾಮಿ ಲೀಗ್ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಂತರ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನವಾಗಿದ್ದ 76 ವರ್ಷದ ಹಸೀನಾ ವಿರುದ್ಧ ಮೊಟ್ಟಮೊದಲ ಬಾರಿಗೆ ಪ್ರಕರಣ ದಾಖಲಾಗಿದೆ.
ಮೊಹಮ್ಮದ್ಪುರದಲ್ಲಿ ಜುಲೈ 19 ರಂದು ಮೀಸಲಾತಿ ಸುಧಾರಣಾ ಹೋರಾಟಗಾರರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾಗ ನಡೆದ ಪೊಲೀಸ್ ಗುಂಡಿನ ದಾಳಿಯಲ್ಲಿ ಕಿರಾಣಿ ಅಂಗಡಿ ಮಾಲೀಕ ಅಬು ಸೈಯದ್ ಅವರು ಸಾವನ್ನಪ್ಪಿದ್ದರು. ಅವರ ಹಿತೈಷಿ ಈ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.
ಅವಾಮಿ ಲೀಗ್ನ ಪ್ರಧಾನ ಕಾರ್ಯದರ್ಶಿ ಒಬೈದುಲ್ ಕ್ವಾಡರ್, ಮಾಜಿ ಗೃಹ ಸಚಿವ ಅಸಾದುಝಮಾನ್ ಖಾನ್ ಕಮಾಲ್ ಮತ್ತು ಮಾಜಿ ಪೊಲೀಸ್ ಮಹಾನಿರೀಕ್ಷಕ ಚೌಧರಿ ಅಬ್ದುಲ್ಲಾ ಅಲ್ ಮಾಮುನ್ ಇತರ ಆರೋಪಿಗಳಾಗಿದ್ದಾರೆ. ಅಲ್ಲದೆ ಹಲವಾರು ಉನ್ನತ ಶ್ರೇಣಿಯ ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಕೂಡ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.