ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಕಾನೂನಿಗೆ ಬೆಲೆ ಕೊಡುವ ವ್ಯಕ್ತಿ. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆಂಬ ನಂಬಿಕೆ ಇದೆ ಎಂದು ಕೇಂದ್ರದ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿಗಿಂತ ಯಾರು ದೊಡ್ಡವರಲ್ಲ
ಕಾನೂನಿನ ಮುಂದೆ ನಾವೆಲ್ಲರೂ ಒಂದೇ. ಬಾಬಾಸಾಹೇಬ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನವನ್ನು ಪಾಲನೆ ಮಾಡಬೇಕು ಎಂದರು.
ಪ್ರಿಯಾಂಕ ಖರ್ಗೆ ಅವರು ಬಿಜೆಪಿಯವರು ಸಿದ್ದರಾಮಯ್ಯ ಅವರ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸಂವಿಧಾನ ಎನ್ನುವುದು ಪ್ರಿಯಾಂಕ ಖರ್ಗೆ ಅವರಿಗೆ ಒಬ್ಬರಿಗೆ ಮಾತ್ರವಲ್ಲ. ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬರಿಗೂ ಸಂವಿಧಾನ ನೀಡಿದ್ದಾರೆ. ಹೀಗಾಗಿ ಸೂರ್ಯ ಚಂದ್ರ ಇರುವವರೆಗೂ ಅಂಬೇಡ್ಕರ್ ಅವರ ಸಂವಿಧಾನದ ಕಾನೂನಿಗೆ ಗೌರವ ಕೊಡಬೇಕು ಎಂದು ಹೇಳಿದರು.
ಸಿದ್ದರಾಮಯ್ಯ ಅವರನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಅವರ ಜೊತೆಗೆ ಕೆಲಸ ಮಾಡಿದ್ದೇನೆ. ಅವರ ವಿರುದ್ಧ ಚುನಾವಣೆ ಎದುರಿಸಿದ್ದೇನೆ. ಹೀಗಾಗಿ ಅವರ ಬಗ್ಗೆ ಬಲ್ಲವನಾಗಿದ್ದೇನೆ. ಸಿದ್ದರಾಮಯ್ಯ ಅವರು ಕಾನೂನನ್ನು ಗೌರವಿಸುತ್ತಾರೆ. ಅವರೇ ಪದೇ ಪದೇ ತಮ್ಮ ಜೀವನ ತೆರೆದ ಪುಸ್ತಕ ಎಂದು ಹೇಳುತ್ತಾರೆ. ಆದರೆ ಇದೀಗ ತೆರೆದ ಪುಸ್ತಕದಲ್ಲಿ ತಪ್ಪುಗಳಾಗಿವೆ. ಹೀಗಾಗಿ ಸಿದ್ದರಾಮಯ್ಯ ಕಾನೂನಿಗೆ ಗೌರವ ಕೊಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದರು.