ಬೆಂಗಳೂರು:- ನಗರದ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ ಕೇಳಿ ಬಂದಿದ್ದು, ತನಿಖೆಗಾಗಿ ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ.
ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ತಿಳಿಸಿದ್ದಾರೆ. ಮಂಗಳವಾರ ತಡರಾತ್ರಿವರೆಗೂ ಠಾಣೆಯಲ್ಲೇ ಉಳಿದುಕೊಂಡಿದ್ದ ಅವರು ಪೊಲೀಸ್ ಸಿಬ್ಬಂದಿಯ ಜೊತೆ ಚರ್ಚೆ ನಡೆಸಿ ಮಾಹಿತಿ ಕಲೆ ಹಾಕಿದ್ದರು. ಪ್ರಕರಣದ ಮುಂದಿನ ಆಯಾಮ ಹಾಗೂ ತನಿಖೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿದ್ದರು.
ವಿಜೇತ ಅಭ್ಯರ್ಥಿ ನಾಸಿರ್ ಹುಸೇನ್ ಜೊತೆ ಬಂದವರ ಪಟ್ಟಿ ಸಂಗ್ರಹಿಸಲಾಗಿದ್ದು, ಟೆಕ್ನಿಕಲ್ ಅನಾಲಿಸಿಸ್ ಹಾಗೂ ವಿಡಿಯೋಗಳನ್ನು ಪರಿಗಣಿಸುವ ಕಾರ್ಯ ಮಾಡಲಾಗುತ್ತಿದೆ. ಸದ್ಯ ವಿಧಾನಸೌಧ ಪೊಲೀಸರು ಘೋಷಣೆ ಕೂಗಿದಾತನ ಶೋಧ ನಡೆಸುತ್ತಿದ್ದಾರೆ.
ಘೋಷಣೆ ಕೂಗಿದ ಸಂದರ್ಭದಲ್ಲಿ ನಾಸೀರ್ ಹುಸೇನ್ ಬಳಿ ಇದ್ದ ವ್ಯಕ್ತಿಗಳನ್ನು ಕರೆಸಿ ಇಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ. ಈ ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಪರಮೇಶ್ವರ್ ಅವರಿಗೆ ಮಾಹಿತಿ ನೀಡಲು ಕಾನೂನು, ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಮುಂದಾಗಿದ್ದಾರೆ. ಬುಧವಾರ ಬೆಳಗ್ಗೆ ಅವರು ಗೃಹ ಸಚಿವರ ನಿವಾಸಕ್ಕೆ ತೆರಳಿದ್ದಾರೆ. ಸದಾಶಿವನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ತೆರಳಿರುವ ಹಿತೇಂದ್ರ, ಮಂಗಳವಾರದ ಘಟನೆ, ಪ್ರಕರಣದ ಬೆಳವಣಿಗೆ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಿದ್ದಾರೆ.