ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮತಯಾಚನೆ ವಿಚಾರವಾಗಿ ಕಾಂಗ್ರೆಸ್ (Congress) ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾರನ್ನು (Kusuma) ಪುರುಷ ಪೊಲೀಸ್ ಸಿಬ್ಬಂದಿ ತಳ್ಳಾಡಿದ್ದಾರೆ ಎನ್ನಲಾಗುತ್ತಿದೆ. ಕುಸುಮಾರನ್ನು ಡಿಸಿಪಿ ತಳ್ಳಿದ್ದಾರೆಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪ ಮಾಡಿದ್ದು, ಯಶವಂತ ಪುರ ಠಾಣೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ.
ಪೊಲೀಸರು ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆಂದು ಆರೋಪಿಸಿ ಧರಣಿ ಮಾಡಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಚೀಟಿ ಹಂಚಿಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.ಈ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಲಾಠಿ ಬೀಸಿದ್ದರು. ಅಭ್ಯರ್ಥಿ ಕುಸುಮಾ ಸೇರಿದಂತೆ ಎಲ್ಲರನ್ನೂ ಪೊಲೀಸರು ಚದುರಿಸಿದ್ದಾರೆ. ಪೊಲೀಸರ ಜತೆ ಸೇರಿ ಬಿಜೆಪಿ ಕಾರ್ಯಕರ್ತರು ಹಲ್ಲೆಮಾಡಿರುವುದಾಗಿ ಕಾಂಗ್ರೆಸ್ ಆರೋಪಿಸುತ್ತಿದೆ.