ಮೈಸೂರು: ಜಾತಿ- ಜಾತಿಗಳಲ್ಲಿ, ಧರ್ಮ-ಧರ್ಮಗಳಲ್ಲಿ ವೈಷಮ್ಯ ಮೂಡಿಸಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದು ಬಿಜೆಪಿ. ಮತ್ತೆ ಕೋಮುಗಲಭೆ ಸೃಷ್ಟಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಆರೋಪಿಸಿದರು. ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಚುನಾವಣೆ ವೇಳೆ ನೀಡಿದ ಒಂದೇ ಒಂದು ಭರವಸೆಗಳನ್ನು ಕೂಡ ಈಡೇರಿಸಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳನ್ನು ಸಹಿಸಲಾಗದ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ.
ಅದಕ್ಕಾಗಿ ನಾವು ಜಾಗೃತರಾಗಬೇಕಿದೆ ಎಂದರು. ರಾಜ್ಯದಲ್ಲಿ ಬಡತನ ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನೀಡಿದ 5 ಗ್ಯಾರಂಟಿ ಯೋಜನೆಗಳಿಗೆ ಸುಮಾರು . 52 ಸಾವಿರ ಕೋಟಿ ಅನುದಾನವನ್ನು ಮೀಸಲಿಟ್ಟು ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಜಾರಿಗೆ ತಂದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಶಕ್ತಿ ಯೋಜನೆ ಜಾರಿಯಾಗಿದ್ದು, ಇದರಿಂದ ಪ್ರತಿದಿನ 50 ಲಕ್ಷ ಮಹಿಳೆಯರು ಸಾರಿಗೆ ಬಸ್ನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.
200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಅನ್ನ ಭಾಗ್ಯ ಯೋಜನೆಗೆ ಬಡವರ ವಿರೋಧಿ ನೀತಿ ಅನುಸರಿಸಿ ಕೇಂದ್ರದ ಬಿಜೆಪಿ ಸರ್ಕಾರ ಅಕ್ಕಿ ಕೋಡುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಎಲ್ಲಿಯವರೆಗೆ ಅಕ್ಕಿ ವ್ಯವಸ್ಥೆ ಆಗುವುದಿಲ್ಲವೋ ಅಲ್ಲಿಯವರೆಗೆ ನೇರ ವರ್ಗಾವಣೆಯ ಮೂಲಕ ಬಡ ಜನರ ಖಾತೆಗೆ ಹಣ ಜಮಾ ಆಗುವ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಅವರು ವಿವರಿಸಿದರು. 5 ಗ್ಯಾರಂಟಿಗಳಲ್ಲಿ ಈಗಾಗಲೇ 3 ಯೋಜನೆಗಳು ಪ್ರಾರಂಭವಾಗಿವೆ.