ಬೆಂಗಳೂರು: ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಅತ್ಯಾಚಾರ ಪ್ರಕರಣ ಸಂಕಷ್ಟ ತಂದೊಡ್ಡಿದೆ. ಶುಕ್ರವಾರ ಬಂಧನಕ್ಕೊಳಗಾಗಿದ್ದ ಅವರನ್ನು ಇಂದು ಕೋರ್ಟ್ಗೆ ಹಾಜರುಪಡಿಸಲಾಯಿತು.
ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಇದರೊಂದಿಗೆ ಅವರು ಮತ್ತೆ ಜೈಲು ಪಾಲಾಗಿದ್ದಾರೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರನ್ನು ಸುತ್ತಿಕೊಂಡಿತ್ತು.