ಹುಬ್ಬಳ್ಳಿ : ಧಾರವಾಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಅತ್ಯಂತ ಹೆಚ್ಚು ಪ್ರಭಾವಿ ನಾಯಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಆಗುತ್ತಲೇ ಬಿಜೆಪಿ ಅಲರ್ಟ್ ಆಗಿದೆ. ಬಿಜೆಪಿಯ ಮೇಲೆ ಲಿಂಗಾಯತ ಸಮುದಾಯ ತೀವ್ರ ಮುನಿಸಿಕೊಂಡಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದ ರಾಜಕೀಯ ಬೆಳವಣಿಗಳು ನಡೆಯುತ್ತಿದ್ದು, ಇದನ್ನೆಲ್ಲ ಶಮನ ಮಾಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಕೇಂದ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮುನಿಸಿಕೊಂಡು ಕಾಂಗ್ರೆಸ್ ಸೇರ್ಪಡೆ ಆಗಿದ್ದರಿಂದ ಬಿಜೆಪಿಗೆ ತೀವ್ರ ಹಿನ್ನೆಡೆಯ ಆತಂಕ ಎದುರಾಗಿದೆ. ಜಗದೀಶ್ ಶೆಟ್ಟರ್ ಪಕ್ಷ ತೊರೆದಿದ್ದರ ಎಫೆಕ್ಟ್ ಉತ್ತರ ಕರ್ನಾಟಕ ವ್ಯಾಪ್ತಿಸದಂತೆ ಬಿಜೆಪಿ ತೆರೆಮರೆಯಲ್ಲಿ ಯೋಜನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಏ.18 ರಂದು ಸಾಯಂಕಾಲ ಜೆ.ಪಿ.ನಡ್ಡಾ ಹುಬ್ಬಳ್ಳಿಗೆ ಬರಲು ವೇಳೆ ನಿಗದಿ ಪಡಿಸಲಾಗಿದೆ .
ಎರಡು ದಿನಗಳ ಕಾಲ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹುಬ್ಬಳ್ಳಿಯಲ್ಲಿಯೇ ಬೀಡು ಬಿಡಲಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ನಡೆಯುವ ಎರಡೂ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಶೆಟ್ಟರ್ ಸ್ಪರ್ಧೆ ಮಾಡುವ ಸೆಂಟ್ರಲ್ ಕ್ಷೇತ್ರದಲ್ಲಿಯೇ ನಡ್ಡಾ ಠಿಕಾಣಿ ಹೂಡಲಿದ್ದಾರೆ. ಈ ವೇಳೆ ಕಾರ್ಯಕರ್ತರ ಜೊತೆಗೆ ಸಂವಾದ ನಡೆಸಲಿದ್ದಾರೆ. ನಾಡಿದ್ದು ಮೂರು ಸಾವಿರ ಮಠ, ಸಿದ್ದಾರೂಡರ ಮಠ ಮಠಕ್ಕೆ ಭೇಟಿ ನೀಡಲಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ. ಸಿಎಂ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಶಿಗ್ಗಾಂವಿ ತೆರಳಿ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ.