ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 15 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು, ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಬಜೆಟ್ ಆರ್ಥಿಕ ಶಿಸ್ತಿನಿಂದ ಕೂಡಿದ್ದು, ಆಶಾದಾಯಕ ಬಜೆಟ್ ಆಗಿದೆ. ಮುಖ್ಯ ಮಂತ್ರಿಗಳು ಪ್ರಸಕ್ತ ಸಾಲಿನಲ್ಲಿ ಐದು ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ಮೀಸಲಿಟ್ಟಿದ್ದು, ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಬಜೆಟ್ ಮಂಡಿಸಿದ್ದಾರೆ ಎಂದು ಶ್ಲಾಘಿಸಿದರು.
ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 500 ಪ್ರತಿಭಾವಂತ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷ ಉಚಿತ ಜೆಇಇ/ಎನ್ಇಇಟಿ ತರಬೇತಿ ನೀಡುವ ಯೋಜ ಘೋಷಣೆ ಮಾಡಿರುವುದು ಸ್ವಾಗತರ್ಹ.
ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳ ಅಧ್ಯಯನಕ್ಕೆ ‘ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಆಯೋಗ ರಚನೆ ಹಾಗೂ
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಎಲ್ಎಟಿ, ಎಂಎಟಿ ಮತ್ತು ಚಾರ್ಟೆಡ್ ಅಕೌಂಟೆಂಟ್ ಫೌಂಡೇಶನ್ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ಪರೀಕ್ಷಾ ಪೂರ್ವ ತರಬೇತಿ ನೀಡುವ ಯೋಜನೆ ಉಪಯುಕ್ತವಾಗಿದೆ ಎಂದಿದ್ದಾರೆ.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ 100 ಸಂಖ್ಯಾಬಲದ ಮೆಟ್ರಿಕ್ ನಂತರದ 75 ಬಾಲಕರ ಮತ್ತು 75 ಬಾಲಕಿಯರ ವಸತಿನಿಲಯಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಪ್ರಾರಂಭಿಸುವುದು. ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ 100 ಸಂಖ್ಯಾಬಲದ 150 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ 174 ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ಒದಗಿಸುವುದು. ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ವಿದ್ಯಾರ್ಥಿನಿಲಯಗಳಿಗೆ ನಾಲ್ಕು ಕೋಟಿ ರೂ. ಗಳ ಘಟಕ ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳನ್ನು ಡಿ.ದೇವರಾಜು ಅರಸು ವಸತಿ ಶಾಲೆಗಳೆಂದು ಮರುನಾಮಕರಣ ಮಾಡಲಾಗುತ್ತದೆ ಎಂದು ಹೇಳಿರುವುದು ಉತ್ತಮ ಬೆಳವಣಿಗೆ ಎಂದಿದ್ದಾರೆ.
ಬಸವಣ್ಣನವರ ಜನ್ಮಸ್ಥಳ ಅಭಿವೃದ್ಧಿಗೆ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ, ಬಸವಣ್ಣ ಹಾಗೂ ಇತರ ಶರಣರ ವಚನಗಳನ್ನು ವಿಶ್ವಕ್ಕೆ ಪರಿಚಯಿಸುವ ವಚನ ಮಂಟಪ ಕಲ್ಬುರ್ಗಿಯಲ್ಲಿ ಸ್ಥಾಪನೆ, ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯದವರ ಕಲೆ ಮತ್ತು ಸಂಸ್ಕೃತಿಯನ್ನು ಗುರುತಿಸಿ, ಉಳಿಸಿ, ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಅಲೆಮಾರಿ ಸಂಸ್ಕೃತಿ ಉತ್ಸವದಂತಹ ಯೋಜನೆಯನ್ನು ಘೋಷಣೆ ಮಾಡಿರುವುದು ಸಂತಸದ ವಿಚಾರ.