ಕೊಡಗು: ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೇ ಮಾದರಿಯಾಗಿವೆ, ಇವುಗಳಲ್ಲಿ ಯಾವುದೇ ಬದಲಾವಣೆಯ ಅವಶ್ಯಕತೆಯಿಲ್ಲ ಹಾಗೂ ಆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತವಾರಿ ಸಚಿವರಾದ ಎನ್.ಎಸ್. ಭೋಸರಾಜು ಪ್ರತಿಕ್ರಿಯಿಸಿದರು.
ವಿರಾಜಪೇಟೆ ತಾಲ್ಲೂಕಿನ ಬೊಳ್ಳಮಾಡು ಗ್ರಾಮದಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ‘ಬೇಲ್ ನಮ್ಮೆ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಎಐಸಿಸಿ ವತಿಯಿಂದ ಆಯೋಜಿಸಲಾಗಿರುವ ಎಲ್ಲಾ ರಾಜ್ಯದ ರಾಜ್ಯಾಧ್ಯಕ್ಷರುಗಳ ಸಭೆಯಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ. ಸಚಿವ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆ ಮಾಡಲು ಅಲ್ಲ. ಸಚಿವ ಸಂಪುಟ ಪುನಾರಚನೆ ಕೇವಲ ಉಹಾಪೋಹ ಎಂದು ಹೇಳಿದರು.