ಬೆಂಗಳೂರು: ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿ ಬರುವಂತಿಲ್ಲ ಎಂದು ಇಂದು ಮತ್ತೊಮ್ಮೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ವಿಕಾಸಸೌಧದಲ್ಲಿ ಮಾತನಾಡಿದ ಅವರು, ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ಗೆ ನಿರ್ಬಂಧಿಸಲಾಗಿದ್ದು, ಹಿಜಾಬ್ ಧರಿಸಿ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಹಿಜಾಬ್ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ. ಹೀಗಾಗಿ ಪರೀಕ್ಷೆ ಸಮಯದಲ್ಲಿ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ನಿರ್ಧಾರ ಪ್ರಕಟಿಸಿದರು.
ಇನ್ನೂ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ವಿವಿಧ ಜಿಲ್ಲೆಗಳಲ್ಲಿ ಕಾಲೇಜು ಪ್ರಾಂಶುಪಾಲರಿಗೆ ಮುಸ್ಲಿಂ ವಿದ್ಯಾರ್ಥಿನಿಯರು ಮನವಿ ಮಾಡಿದ್ದರು. ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕಾಲೇಜುಗಳಲ್ಲಿ ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದ್ದರು ಎಂದು ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ. ಆದ್ರೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪಿಯು ಕಾಲೇಜು ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಇಂತಹ ಮನವಿಗಳನ್ನು ಪರಿಗಣಿಸದಂತೆ ಸೂಚನೆಗಳನ್ನು ನೀಡಿದೆ.