ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಾದ ಕೋಟ್ಯಂತರ ರೂಪಾಯಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್, ನೈತಿಕತೆಯ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ರಾಜೀನಾಮೆ ನೀಡದಿದ್ದಲ್ಲಿ ಬಿಜೆಪಿಯಿಂದ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಸಣ್ಣ ನೆಪ ಮಾತ್ರ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇರ ಪಾತ್ರವಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಯ ಗಮನಕ್ಕೆ ಬಾರದೆ 187 ಕೋಟಿ ರೂ. ಮೊತ್ತದ ಹಗರಣ ನಡೆಯಲು ಸಾಧ್ಯವೇ ಇಲ್ಲ.
ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಲೋಕಸಭಾ ಚುನಾವಣೆಗಾಗಿ ರಾಹುಲ್ ಗಾಂಧಿ ಬಳಗಕ್ಕೆ ಈ ಹಣ ತಲುಪಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕಾಂಗ್ರೆಸ್ನ ದುರದೃಷ್ಟವೆಂಬಂತೆ ಪ್ರಾಮಾಣಿಕ ಅಧಿಕಾರಿಯ ಆತ್ಮಹತ್ಯೆಯಿಂದಾಗಿ ಹಗರಣ ಹೊರ ಬಂದಿದೆ. ಈಗ ಇದನ್ನು ಮುಚ್ಚಿ ಹಾಕಲು ಎಲ್ಲ ಬಗೆಯ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಆರ್. ಅಶೋಕ್ ಆರೋಪಿಸಿದ್ದಾರೆ.