ಮೈಸೂರು: ನಾನು ಹಾಗೂ ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದೇವೆ. ಪಕ್ಷ ಹಾಗೂ ಸರ್ಕಾರದ ವಿಚಾರವಾಗಿ ಚರ್ಚೆ ನಡೆಸುತ್ತೇವೆ ಎಂದು ದೆಹಲಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸುವ ಸಂಬಂಧ ಮೈಸೂರಿಗೆ ತೆರಳಿರುವ ಅವರು, ದೆಹಲಿ ಭೇಟಿ ಬಗ್ಗೆ ಮಾಹಿತಿ ನೀಡಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಕೆಲವು ಸಚಿವರ ತಲೆದಂಡವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ನಂತರ ಅಷ್ಟೊಂದು ರಾಜಕೀಯ ಬೆಳವಣಿಗೆಗಳು ನಡೆದಿರಲಿಲ್ಲ. ಆದರೆ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ನಾಗೇಂದ್ರ ರಾಜೀನಾಮೆ ನೀಡಬೇಕಾಯಿತು. ಅದಾದ ನಂತರ ಮುಡಾ ಸೇರಿದಂತೆ ಸಾಲು ಹಗರಣಗಳ ಆರೋಪ ಕಾಂಗ್ರೆಸ್ ಸರ್ಕಾರದ ಮೇಲೆ ಕೇಳಿಬಂದಿರುವುದು ಹೈಕಮಾಂಡ್ ಅನ್ನು ಮುಜುಗರಕ್ಕೀಡು ಮಾಡಿದೆ ಎನ್ನಲಾಗಿದೆ.