ಬೆಂಗಳೂರು: ಈಗಾಗಲೇ ನಾವು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವೆ. ಈಗಾಗಲೇ ಒಂದು ಗ್ಯಾರಂಟಿ ಜಾರಿ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಐದು ಗ್ಯಾರಂಟಿಗಳಲ್ಲಿ ಅನ್ನಾಭಾಗ್ಯ ಯೋಜನೆಯೂ ಒಂದು. ಪ್ರತಿಯೊಬ್ಬರಿಗೆ ತಲಾ 10 ಕೆಜಿ ಅಕ್ಕಿ ಕೊಡ್ತೇವೆ ಎಂದು ಹೇಳಿದ್ದೇವೆ. BPL, ಅಂತ್ಯೋದಯ ಕಾರ್ಡ್ನವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ. ಜುಲೈ 1ರಿಂದ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೆವು. ತಿಂಗಳಿಗೆ 2 ಲಕ್ಷದ 28 ಸಾವಿರ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಬೇಕು ಎಂದರು.
ಅನ್ನಭಾಗ್ಯ ಯೋಜನೆಗಾಗಿ ತಿಂಗಳಿಗೆ 840 ಕೋಟಿ ರೂ. ವೆಚ್ಚ ಆಗಲಿದೆ. ಪ್ರತಿ ವರ್ಷಕ್ಕೆ 10,092 ಕೋಟಿ ರೂ. ಬೇಕು. ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ FCI ಡೆಪ್ಯುಟಿ ಮ್ಯಾನೇಜರ್ ಜೊತೆ ಚರ್ಚೆ ಮಾಡಿದ್ದು, ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ. ಇಷ್ಟೆಲ್ಲ ಆದ್ಮೇಲೆ ಡೆಪ್ಯುಟಿ ಮ್ಯಾನೇಜರ್ ಜೂ.12ರಂದು ಪತ್ರ ಬರೆದಿದ್ದಾರೆ. ಜೂನ್ 12ರಂದು ಹೆಚ್ಚುವರಿ ಅಕ್ಕಿ ಕೊಡುವುದಾಗಿ ಒಪ್ಪಿಗೆ ನೀಡಿದ್ದರು. ಇದಾದ ಬಳಿಕ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದರು.
ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದೆ. ಅಕ್ಕಿ ಪೂರೈಸಲು ಛತ್ತೀಸ್ಗಢ ಸರ್ಕಾರಕ್ಕೂ ಮನವಿ ಮಾಡಿದ್ದೇವೆ. ಬಿಜೆಪಿಯವರು ಬಡವರ ವಿರೋಧಿಗಳು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.