ಬೆಂಗಳೂರು: ಮುಖ್ಯಮಂತ್ರಿಗಳ ಜತೆ ಮಾತನಾಡಿ ಗೃಹಲಕ್ಷ್ಮಿ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆದಿದ್ದೇನೆ. ಗೃಹಜ್ಯೋತಿ ಯೋಜನೆ ಅರ್ಜಿ ವಿಚಾರವಾಗಿ ಸರ್ವರ ಸಮಸ್ಯೆ ನೋಡುತ್ತಿದ್ದೀರಿ. ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆಲ್ ಲೈನ್ ಹಾಗೂ ಆಫ್ ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ.
ಈ ವಿಚಾರವಾಗಿ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ಮಾಡಲಾಗುವುದು. ಈ ಯೋಜನೆಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೆಲವರು 200-300 ರೂ. ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಿಗೆ ರದ್ದಾಗುತ್ತದೆ, ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡುತ್ತಿದ್ದೇನೆ. ಈ ಯೋಜನೆಗಳಿಗೆ ನೋಂದಣಿ ಮಾಡಿಕೊಳ್ಳಲು ಹೋಗುವವರು ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ. ನಾವು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಲಂಚ ಮುಕ್ತ ರಾಜ್ಯ ನಮ್ಮ ಗುರಿ’ ಎಂದು ತಿಳಿಸಿದರು.
ಹೊಸ ಶಾಸಕರ ತರಬೇತಿಗೆ ಧಾರ್ಮಿಕ ಗುರುಗಳ ಭಾಷಣ ಕುರಿತಾಗಿ ಸ್ಪೀಕರ್ ವಿರುದ್ಧ ಎದ್ದಿರುವ ಅಸಮಾಧಾನದ ಬಗ್ಗೆ ಕೇಳಿದಾಗ, ‘ಸ್ಪೀಕರ್ ಅವರಿಗೆ ಅವರದೇ ಆದ ಅಧಿಕಾರ ಇದೆ. ನಾವು ಅದರ ಬಗ್ಗೆ ಮಾತನಾಡಲು ಆಗುವುದಿಲ್ಲ. ನಿಮ್ಮ ಬಳಿ ಏನಾದರೂ ಸಲಹೆ ಇದ್ದರೆ ಅವರಿಗೆ ನೀಡಿ. ಉಳಿದ ವಿಚಾರವನ್ನು ನಾನು ಅವರ ಜತೆ ಖಾಸಗಿಯಾಗಿ ಮಾತನಾಡುತ್ತೇನೆ’ ಎಂದರು.