ಬೆಂಗಳೂರು ;- ಆಗಸ್ಟ್ 11ರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದೆ ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದರು.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಂಬುಲೆನ್ಸ್ ಮತ್ತು ಇತರೆ ಅಗತ್ಯ ವಾಹನಗಳನ್ನು ನಿಯೋಜಿಸುವ ಕೆಲಸ ಆಗಬೇಕಾಗಿದೆ. ಕಾಫಿ ಕೆಫೆ ಆರಂಭಿಸುವ ಸಂಬಂಧದ ಕೆಲಸವೂ ಆಗಬೇಕಿದೆ. ಜೊತೆಗೆ, ಕೆಲವು ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿ ನೇಮಕ ನಡೆಯಬೇಕಿದೆ. ಇವೆಲ್ಲವನ್ನೂ ಜುಲೈ 20ರ ಹೊತ್ತಿಗೆ ಪೂರೈಸಿ ವಿಮಾನ ನಿಲ್ದಾಣವನ್ನು ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗುವುದು.
ಕೇಂದ್ರ ನಾಗರಿಕ ವಿಮಾನ ನಿರ್ದೇಶನಾಲಯವು ಇಲ್ಲಿನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ವಹಿಸಿದೆ. ಇದರೊಂದಿಗೆ ಶಿವಮೊಗ್ಗ ನಿಲ್ದಾಣವು ರಾಜ್ಯ ಸರ್ಕಾರದ ಸಂಸ್ಥೆಯ ವತಿಯಿಂದ ನಡೆಯಲಿರುವ ಕರ್ನಾಟಕದ ಮೊದಲನೇ ವಿಮಾನ ನಿಲ್ದಾಣವಾಗಲಿದೆ ಎಂದು ತಿಳಿಸಿದ್ದಾರೆ.